ADVERTISEMENT

ಶಿವಮೊಗ್ಗ | 60 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದ ಬೂಸ್ಟರ್ ಡೋಸ್‌

ಮೊದಲ ಹಂತದಲ್ಲಿ 2 ಲಕ್ಷ ಜನರಿಗೆ ಮೂರನೇ ಲಸಿಕೆ, ಡಿ.12ರ ಒಳಗೆ ಮಕ್ಕಳ ಲಸಿಕೆ ಪೂರ್ಣ

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 5:40 IST
Last Updated 9 ಜನವರಿ 2022, 5:40 IST
ಶಿವಮೊಗ್ಗದಲ್ಲಿ ಶನಿವಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿದರು.
ಶಿವಮೊಗ್ಗದಲ್ಲಿ ಶನಿವಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿದರು.   

ಶಿವಮೊಗ್ಗ: ಜಿಲ್ಲೆಯಲ್ಲಿ ಜ.10ರಿಂದ 60ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್‌ ನೀಡಲಾಗುವುದು. ಈಗಾಗಲೇ ಎರಡನೇ ಡೋಸ್ ಪಡೆದು 90 ದಿನ ಆದವರು ಬೂಸ್ಟರ್ ಡೋಸ್ ಪಡೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬೂಸ್ಟರ್ ಡೋಸ್ ಪಡೆಯಲು ಅರ್ಹರಾದ ಒಟ್ಟು 2 ಲಕ್ಷ ಜನರು ಇದ್ದಾರೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ನೀಡಲು ವ್ಯವಸ್ಥೆ ಮಾಡಲಾಗುವುದು. 15ರಿಂದ 18ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ. ಡಿ.12ರೊಳಗೆ ಎಲ್ಲಾ 83,831 ಮಂದಿಗೆ ಲಸಿಕೆ ನೀಡುವ ಕಾರ್ಯ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ADVERTISEMENT

ಸರ್ಕಾರದ ಮಾರ್ಗಸೂಚಿ ಪ್ರಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜನರು ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ. ಎಲ್ಲರೂ ಸಹಕಾರ ನೀಡಬೇಕು. ಕೋವಿಡ್ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆ ಕೈಗೊಂಡಿದೆ. ಆರೋಗ್ಯ ವ್ಯವಸ್ಥೆ ಸುಧಾರಿಸಿದೆ. ಎಲ್ಲ ತಾಲ್ಲೂಕುಗಳಲ್ಲೂ ಸೂಕ್ತ ಹಾಸಿಗೆ ವ್ಯವಸ್ಥೆ, ಆಮ್ಲಜನಕ ಲಭ್ಯತೆ ಖಾತ್ರಿಪಡಿಸಲು ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನರು ಗುಂಪು ಸೇರುವುದನ್ನು ತಪ್ಪಿಸಲು ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ. ಜನರು ಭಯಪಡುವ ಅಗತ್ಯ ಇಲ್ಲ ಎಂದರು.

‘ಗ್ರಾಮೀಣ ಪ್ರದೇಶದಲ್ಲಿ ಆಯಾ ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದಲ್ಲಿ ಹಿಂದೆ ರಚಿಸಲಾಗಿದ್ದ ಟಾಸ್ಕ್‌ಫೋರ್ಸ್‌ಗಳು ಮತ್ತೆ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಸಕ್ರಿಯವಾಗಿ ಸಭೆಗಳಲ್ಲಿ ಭಾಗವಹಿಸಬೇಕು. ಯಾವುದೇ ದೂರುಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸಬೇಕು’ ಎಂದು ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಮಾತನಾಡಿ, ‘ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ಧತೆ ಮಾಡಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 1,382 ಹಾಸಿಗೆಗಳು ಲಭ್ಯವಿವೆ. ಕೋವಿಡ್ ಸಮರ್ಪಕ ನಿರ್ವಹಣೆಗೆ ವಾರ್‌ರೂಂ ಆರಂಭಿಸಲಾಗಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಸೇರಿ ಅಗತ್ಯ ಮೂಲಸೌಕರ್ಯ ಸಜ್ಜುಗೊಳಿಸಲಾಗಿದೆ. ನರ್ಸ್‌ಗಳ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಶೇ 97.67 ಜನರು ಪ್ರಥಮ ಡೋಸ್ ಪಡೆದಿದ್ದಾರೆ. ಶೇ 80ರಷ್ಟು ಎರಡನೇ ಡೋಸ್ ಪಡೆದಿದ್ದಾರೆ ಎಂದು ವಿವರ ನೀಡಿದರು.

ಶಾಸಕರಾದ ಅಶೋಕ್‌ನಾಯ್ಕ, ವಿಧಾನ ಪರಿಷತ್‌ ಸದಸ್ಯರಾದ ಎಸ್‌. ರುದ್ರೇಗೌಡ, ಡಿ.ಎಸ್. ಅರುಣ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.