ADVERTISEMENT

ಶಿಕಾರಿಪುರ: ಬೈಪಾಸ್ ರಸ್ತೆ ನಿರ್ಮಾಣ ಖಂಡಿಸಿ ರೈತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2023, 14:32 IST
Last Updated 29 ನವೆಂಬರ್ 2023, 14:32 IST
ಶಿಕಾರಿಪುರ ಸಮೀಪ ಬೈಂದೂರು- ರಾಣೇಬೆನ್ನೂರು ರಾಷ್ಟ್ರೀಯ ಹೆದ್ದಾರಿಗೆ ಬೈಪಾಸ್ ರಸ್ತೆ ನಿರ್ಮಾಣ ವಿರೋಧಿಸಿ ಕೃಷಿ ಭೂಮಿ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬುಧವಾರ ತಾಲ್ಲೂಕು ಕಚೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಲ್ಲೇಶಪ್ಪ ಬಿ.ಪೂಜಾರ್ ಅವರಿಗೆ ಮನವಿ ಸಲ್ಲಿಸಿದರು.
ಶಿಕಾರಿಪುರ ಸಮೀಪ ಬೈಂದೂರು- ರಾಣೇಬೆನ್ನೂರು ರಾಷ್ಟ್ರೀಯ ಹೆದ್ದಾರಿಗೆ ಬೈಪಾಸ್ ರಸ್ತೆ ನಿರ್ಮಾಣ ವಿರೋಧಿಸಿ ಕೃಷಿ ಭೂಮಿ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬುಧವಾರ ತಾಲ್ಲೂಕು ಕಚೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಲ್ಲೇಶಪ್ಪ ಬಿ.ಪೂಜಾರ್ ಅವರಿಗೆ ಮನವಿ ಸಲ್ಲಿಸಿದರು.   

ಶಿಕಾರಿಪುರ: ಬೈಂದೂರು– ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಗೆ ಬೈಪಾಸ್ ರಸ್ತೆ ನಿರ್ಮಾಣ ವಿರೋಧಿಸಿ ಚನ್ನಳ್ಳಿ, ನೆಲವಾಗಿಲು, ಗಬ್ಬೂರು, ಹಳಿಯೂರು, ಸದಾಶಿವಪುರ ಗ್ರಾಮದ ರೈತರು ಕೃಷಿಭೂಮಿ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಲ್ಲೇಶಪ್ಪ ಬಿ.ಪೂಜಾರ್ ಅವರಿಗೆ ಮನವಿ ಸಲ್ಲಿಸಿದರು.

‘ಬೈಂದೂರು– ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಗೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ನೀರಾವರಿ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಬೈಪಾಸ್ ರಸ್ತೆ ನಿರ್ಮಾಣ ಪಟ್ಟಣದಿಂದ 5 ಕಿ.ಮೀ ವ್ಯಾಪ್ತಿಯಲ್ಲಿರಬೇಕು. ಪಟ್ಟಣ ಸಮೀಪದ ಕೇವಲ 1 ಕೀ.ಮಿ. ವ್ಯಾಪ್ತಿಯಲ್ಲಿ ಬೈಪಾಸ್ ರಸ್ತೆ ನಿರ್ಮಿಸುತ್ತಿರುವುದು ಅವೈಜ್ಞಾನಿಕವಾಗಿದೆ ಎಂದರು.

‘ಅಭಿವೃದ್ಧಿ ಕಾರ್ಯ ನಡೆಸಲು ಬಂಜರು ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕು. ನೀರಾವರಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಅಧಿಕಾರಿಗಳು ಬಲಾಢ್ಯ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಬೈಪಾಸ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಾಲ್ಕು ಬಾರಿ ಮನವಿ ಸಲ್ಲಿಸಿದರೂ ರೈತರ ಪರ ಯಾವುದೇ ಕ್ರಮ ಕೈಗೊಂಡಿಲ್ಲ. ರಸ್ತೆ ನಿರ್ಮಾಣಕ್ಕಾಗಿ ಒಂದು ಜನಾಂಗದ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ಕಾಡಾ’ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ರೈತರಾದ ಗುಡ್ಡಳ್ಳಿ ಪರಮೇಶ್ವರಪ್ಪ, ಚಿಟ್ಟೂರು ಬಸವರಾಜಪ್ಪ, ಚಿಟ್ಟೂರು ರೇವಣಪ್ಪ, ಪಾರಿವಾಳ ಗಣೇಶ್, ಮಾರವಳ್ಳಿ ಉಮೇಶ್, ರೇವಣಪ್ಪ, ನೂರ್ ಅಹಮದ್, ಅಬ್ದುಲ್ ಮುನಾಫ್, ನಗರದ ರವಿಕಿರಣ್, ಗುಡ್ಡಳ್ಳಿ ಕೃಷ್ಣ, ಹಳ್ಳೂರು ಸತೀಶ್, ನಾಗಪ್ಪ, ಗುಡದಪ್ಪ, ಮುರ್ಲೇರ್ ಗೋಪಿ, ಮಧು, ದಾನೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.