ಶಿವಮೊಗ್ಗ: ನಿವೃತ್ತ ಸರ್ಕಾರಿ ನೌಕರರಿಗೆ ಪಿಂಚಣಿ ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಧರಿಸಿರುವುದನ್ನು ಖಂಡಿಸಿ ಸೋಮವಾರ ನಿವೃತ್ತ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಕಳುಹಿಸಿದರು.
ಕೇಂದ್ರ ಸರ್ಕಾರ ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ವೇತನ ಪರಿಷ್ಕರಿಸಲು ಈಗಾಗಲೇ ಎಂಟನೇ ವೇತನ ಆಯೋಗವನ್ನು ರಚನೆ ಮಾಡಲಾಗಿದೆ. ಆಯೋಗ ಕೂಡ ಈಗಾಗಲೇ ಕಾರ್ಯೋನ್ಮುಖವಾಗಿದೆ. ಆದರೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಹಣಕಾಸು ಬಿಲ್ ಮಂಡಿಸುವಾಗ ‘ಏಪ್ರಿಲ್ 1, 2026ಕ್ಕೆ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಲು ಸಾಧ್ಯವಾಗುವುದಿಲ್ಲ ಎಂಬ ನಿರ್ಣಯವನ್ನು ಲೋಕಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಪಿಂಚಣಿದಾರರಿಗೆ ಆರ್ಥಿಕ ಸಂಕಷ್ಟವನ್ನು ತರುತ್ತದೆ’ ಎಂದು ಪ್ರತಿಭಟನಾಕಾರರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಪಿಂಚಣಿದಾರರ ಒಕ್ಕೂಟ ಇತ್ತೀಚೆಗೆ ಸಭೆ ನಡೆಸಿ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿದೆ. ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶರಣಪ್ಪ, ರಾಜ್ಯ ಕಾರ್ಯದರ್ಶಿ ಎಸ್.ಆರ್. ಚಂದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಷಣ್ಮುಖಪ್ಪ, ಪದಾಧಿಕಾರಿಗಳಾದ ಡಿ.ವಿ. ಭವಾನಿ, ಹನುಮಂತಪ್ಪ, ಗಿರೀಶ್, ಲಲಿತಾ, ಜಿ. ಕೆಂಚಪ್ಪ, ಗುರುಸಿದ್ದಪ್ಪ, ಬಸವರಾಜಪ್ಪ, ಭಗವಂತರಾವ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.