ಹೊಸನಗರ ತಾಲ್ಲೂಕು ಹೂವಿನ ಕೋಣೆ ಸರ್ಕಾರಿ ಶಾಲೆಗೆ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು
ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಹೂವಿನಕೋಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಶಿವಮೊಗ್ಗದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಂದ ಈ ಕುರಿತ ವರದಿ ಕೇಳಿದೆ.
‘ಶಾಲೆಯ ನೀರಿನ ಟ್ಯಾಂಕ್‌ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವುದು ಅಕ್ಷಮ್ಯ. ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಘಟಿಸಬಹುದಾದ ದೊಡ್ಡ ದುರಂತ ತಪ್ಪಿದೆ. ಇದು ಗಂಭೀರ ಸಂಗತಿ ಆಗಿದ್ದು, ಪತ್ರ ಬರೆದು ಡಿಡಿಪಿಐ ಅವರಿಂದ ವರದಿ ಕೇಳಿದ್ದೇವೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದ್ದಾರೆ.
‘ಹೂವಿನಕೋಣೆ ಶಾಲೆಗೆ ಶನಿವಾರ ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಶಿಕ್ಷಕರು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ಟ್ಯಾಂಕ್‌ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಲು ಬಳಸಿದ್ದ ಬಾಟಲಿ ಲಭ್ಯವಾಗಿದೆ. ಆರೋಪಿಗಳ ಬಗ್ಗೆ ಕೆಲವು ಸುಳಿವು ಕೂಡ ದೊರೆತಿವೆ. ಶೀಘ್ರ ಅವರನ್ನು ಬಂಧಿಸಲಾಗುವುದು’ ಎಂದರು.
ಪ್ರಕರಣದ ತನಿಖೆಗೆ ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ ಕಲಗುಜ್ಜಿ ನೇತೃತ್ವದಲ್ಲಿ 18 ಜನ ಸಿಬ್ಬಂದಿಯನ್ನು ಒಳಗೊಂಡ ಮೂರು ತಂಡಗಳನ್ನು ರಚಿಸಲಾಗಿದೆ. ಹೂವಿನಕೋಣೆ ಗ್ರಾಮದ ಸುತ್ತಮುತ್ತಲೂ ಮಾಹಿತಿ ಸಂಗ್ರಹ ಹಾಗೂ ಅನುಮಾನಸ್ಪದ ವ್ಯಕ್ತಿಗಳ ವಿಚಾರಣೆಗಾಗಿ ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.