ADVERTISEMENT

ಅಲ್ಪ ಸಮಯಕ್ಕಾದರೂ ಸಿಎಂ ಆಗಲು ಬಿಎಸ್‌ವೈ ವಿರುದ್ಧ ಈಶ್ವರಪ್ಪ ಪಿತೂರಿ: ಪ್ರಸನ್ನ

KBP news

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 13:37 IST
Last Updated 2 ಏಪ್ರಿಲ್ 2021, 13:37 IST
ಕೆ.ಬಿ.ಪ್ರಸನ್ನಕುಮಾರ್
ಕೆ.ಬಿ.ಪ್ರಸನ್ನಕುಮಾರ್   

ಶಿವಮೊಗ್ಗ: ಅಲ್ಪ ಸಮಯಕ್ಕಾದರೂ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ಬಯಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನಕುಮಾರ್ ಆರೋಪಿಸಿದರು.

2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗುವುದಿಲ್ಲ ಎನ್ನುವುದು ಈಶ್ವರಪ್ಪ ಅವರಿಗೆ ಖಾತ್ರಿಯಾಗಿದೆ. ಅದಕ್ಕಾಗಿ ಈ ಅವಧಿಯಲ್ಲೇ ಮುಖ್ಯಮಂತ್ರಿಯಾಗುವ ಅಭಿಲಾಷೆ ಇಟ್ಟುಕೊಂಡಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿರುವ ಕಾರಣ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಇಲ್ಲವೇ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

2018ರ ವಿಧಾನಸಭಾ ಚುನಾವಣೆ ಸಮಯದಲ್ಲೂ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್‌ ನೀಡಲು ಪಕ್ಷ ವಿಳಂಬ ಮಾಡಿತ್ತು. ಕಾಂಗ್ರೆಸ್‌, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದರೂ ಈಶ್ವರಪ್ಪ ಅವರಿಗೆ ಟಿಕೆಟ್ ಘೋಷಣೆಯಾಗಿರಲಿಲ್ಲ. ಈಶ್ವರಪ್ಪನವರಿಗೆ ಟಿಕೆಟ್ ನೀಡುವುದು ವಿಳಂಬವಾಗಿದ್ದು ಬಿ.ಎಸ್.ಯಡಿಯೂರಪ್ಪ ಅವರಿಂದಲೇ ಎಂದು ಆರೋಪ ಮಾಡಿದ್ದರು. ಈಗಲೂ ಅವರ ಮಧ್ಯದ ವಿರಸ ಮುಂದುವರಿದಿದೆ ಎಂದರು.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವರಾಗಿ ಈಶ್ವರಪ್ಪ ಅವರು ದಕ್ಷ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿಸಿದ್ದಾರೆ. ಕಾನೂನು ಪ್ರಕಾರ ಕೆಲಸ ಮಾಡಲು ಅಧಿಕಾರಿಗಳಿಗೆ ಅವಕಾಶ ನೀಡುತ್ತಿಲ್ಲ. ಸ್ಮಾರ್ಟ್‌ಸಿಟಿ ಕಾಮಗಾರಿಗಳಲ್ಲೂ ಭ್ರಷ್ಟಾಚಾರ ನಡೆದಿದೆ. ಹುಣಸೋಡು ಸ್ಪೋಟ ಪ್ರಕರಣ ತನಿಖೆ ದಾರಿ ತಪ್ಪುತ್ತಿದೆ. ತಪ್ಪಿತಸ್ಥರನ್ನು ಬಂಧಿಸಬೇಕು. ಹಾನಿಗೊಳಗಾದ ಮನೆಗಳ ದುರಸ್ತಿಗೆ ಪರಿಹಾರ ನೀಡಬೇಕು. ನಿಯಮಬಾಹಿರವಾಗಿ ನೇಮಕವಾಗಿ ಭ್ರಷ್ಟಾಚಾರದಲ್ಲಿ ತೊಡಗಿರುವ ವೈದ್ಯಕೀಯ ಕಾಲೇಜು ನಿರ್ದೇಶಕರನ್ನು ಬದಲಿಸದಿದ್ದರೆ ಧರಣಿ ನಡೆಸಲಾಗುವುದು ಎಂದರು.

ನಗರ ಪಾಲಿಕೆ ಸದಸ್ಯ ಬಿ.ಎ.ರಮೇಶ್ ಹೆಗ್ಡೆ, ಕೆ.ಬಿ.ಪ್ರಸನ್ನಕುಮಾರ್ ಅವರು ಶಾಸಕರಾಗಿದ್ದ ಅವಧಿಯಲ್ಲಿ ಬಡವರಿಗೆ ಸೂರು ಕಲ್ಪಿಸಲು ಗೋವಿಂದಪುರದಲ್ಲಿ 3 ಸಾವಿರ ಹಾಗೂ ಗೋಪಿಶೆಟ್ಟಿ ಕೊಪ್ಪದಲ್ಲಿ 1836 ಫಲಾನುಭವಿಗಳನ್ನುಪಾರದರ್ಶಕವಾಗಿ ಆಯ್ಕೆ ಮಾಡಿದ್ದರು. ಆದರೆ, ಈಶ್ವರಪ್ಪ ಅವರು ಬಡವರಿಗೆ ಮನೆಗಳನ್ನು ನಿರ್ಮಿಸಲು ಆಸಕ್ತಿ ತೋರುತ್ತಿಲ್ಲ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯರಾದ ಆರ್.ಸಿ.ನಾಯಕ್, ರೇಖಾ ರಂಗನಾಥ್, ಮಂಜುಳಾ ಶಿವಣ್ಣ, ಮೆಹಕ್ ಷರೀಫ್, ಮುಖಂಡರಾದ ಕೆ.ರಂಗನಾಥ್, ಪವನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.