ADVERTISEMENT

ಇಂಧನ ಬೆಲೆ ಏರಿಕೆ ಖಡಿಸಿ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 11:32 IST
Last Updated 19 ಡಿಸೆಂಬರ್ 2020, 11:32 IST
ಶಿವಮೊಗ್ಗದಲ್ಲಿ ಶನಿವಾರ ಕಾಂಗ್ರೆಸ್‌ ಕಾರ್ಯಕರ್ತರು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಶನಿವಾರ ಕಾಂಗ್ರೆಸ್‌ ಕಾರ್ಯಕರ್ತರು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಹೊರೆ ಮಾಡಿದೆ. ಎರಡು ವಾರಗಳ ಹಿಂದೆ ಗೃಹಬಳಕೆ ಸಿಲಿಂಡರ್ ದರ ಹೆಚ್ಚಳ ಮಾಡಿತ್ತು. ಈಗ ಮತ್ತೆ ಹೆಚ್ಚಳ ಮಾಡಿದೆ. 15 ದಿನಗಳಲ್ಲಿ ₹ 100 ಏರಿಕೆಯಾಗಿದೆ. ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಕೊರೊನಾ ಬಿಕ್ಕಟ್ಟು, ಆರ್ಥಿಕ ಮುಗ್ಗಟ್ಟಿನಿಂದ ಬಸವಳಿದ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಸರ್ಕಾರ ನೀಡುತ್ತಿದ್ದ ಸಬ್ಸಿಡಿಯನ್ನು 6 ತಿಂಗಳಿನಿಂದ ನಿಲ್ಲಿಸಲಾಗಿದೆ. ಸಿಲಿಂಡರ್ ದರ ಭಾರಿ ಹೆಚ್ಚಳ ಮಾಡಲಾಗಿದೆ. ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವೂ ಗಗನ ಮುಖಿಯಾಗಿದೆ. ವಾಹನಗಳ ಮಾಲೀಕರು, ಲಾರಿ, ಬಸ್, ಟ್ಯಾಕ್ಸಿ ಮಾಲೀಕರಿಗೆ ಬಿಸಿ ತಟ್ಟಿದೆ. ಪರೋಕ್ಷವಾಗಿ ಇದು ದಿನ ಬಳಕೆ ವಸ್ತುಗಳ ಮೇಲೂ ಪರಿಣಾಮ ಬೀರಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ರೈತರು, ಬಡ, ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಸರಕು ಸಾಗಾಣೆ ದರಗಳ ಹೆಚ್ಚಳವಾಗಿ ವಸ್ತುಗಳ ಬೆಲೆಗಳಲ್ಲೂ ಏರಿಕೆಯಾಗಿದೆ. ಕೃಷಿ ಮತ್ತು ಮಾರಾಟಕ್ಕೂ ಧಕ್ಕೆಯಾಗಿದೆ. ಅರ್ಥವ್ಯವಸ್ಥೆಗೆ ಪೆಟ್ಟು ಬಿದ್ದಿದೆ ಎಂದು ದೂರಿದರು.

ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ತನ್ನ ಸ್ನೇಹಿತರ ಜತೆ ಸೇರಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದು ಖಂಡನೀಯ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಸಂತ್ರಸ್ತ ಬಾಲಕಿಗೆ ಪರಿಹಾರ ನೀಡಬೇಕು. ಸೂಕ್ತ ತನಿಖೆ ನಡೆಸಬೇಕು. ಹೆಣ್ಣುಮಕ್ಕಳಿಗೆ ರಕ್ಷಣೆ ಒದಗಿಸಬೇಕು. ಘಟನೆ ಮರುಕಳಿಸದಂತೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮುಖಂಡರಾದ ಎಚ್.ಸಿ.ಯೋಗೀಶ್,ವೈ.ಎಚ್.ನಾಗರಾಜ್, ಎಲ್.ರಾಮೇಗೌಡ, ಸೈಯದ್ ವಾಹಿದ್, ಮುಕ್ತಿಯಾರ್ ಅಹಮದ್‌, ನಯಾಜ್ ಅಹಮದ್‌, ಶಿವಾನಂದ, ಆರ್.ಸಿ.ನಾಯ್ಕ, ರೇಖಾ ರಂಗನಾಥ್, ಮೆಹಕ್ ಷರೀಫ್, ಮಂಜುಳಾ ಶಿವಣ್ಣ, ಯಮುನಾ ರಂಗೇಗೌಡ, , ಚಂದನ್, ಸುವರ್ಣಾ ನಾಗರಾಜ್, ಸೌಗಂಧಿಕ, ಗಿರೀಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.