ಕಿಮ್ಮನೆ ರತ್ನಾಕರ
ಶಿವಮೊಗ್ಗ: ‘ಸಂವಿಧಾನದ ಬದಲಾವಣೆಯ ಆಲೋಚನೆ ಆರ್.ಎಸ್.ಎಸ್ ಮತ್ತು ಬಿಜೆಪಿಯದ್ದೇ ಹೊರತೂ ಕಾಂಗ್ರೆಸ್ ಪಕ್ಷದ್ದಲ್ಲ. ಆ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ತಿರುಚಲಾಗಿದೆ’ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಆರೋಪಿಸಿದರು.
‘ಡಿ.ಕೆ.ಶಿವಕುಮಾರ್ ಅವರ ಮಾತಿನ ಒಂದು ಎಳೆಯನ್ನು ಇಟ್ಟುಕೊಂಡು ಬಿಜೆಪಿಯವರು ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಸಂಸತ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಪ್ರಸ್ತಾಪಿಸಿದ್ದಾರೆ. ಸಂವಿಧಾನದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
‘ಡಿ.ಕೆ. ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದೇನೂ ಹೇಳಿಲ್ಲ. ಹಾಗೆ ಹೇಳಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂಬುದಾಗಿಯೂ ಹೇಳಿದ್ದಾರೆ. ಧರ್ಮಾಧಾರಿತ ಮೀಸಲಾತಿ ನೀಡಲು ಅಗತ್ಯ ಬಿದ್ದರೆ ಸಂವಿಧಾನ ತಿದ್ದುಪಡಿಗೆ ಅವಕಾಶವಿದೆ ಎಂದು ಹೇಳಿದ್ದಾರೆ. ಆದರೆ ಅದನ್ನು ತಿರುಚಿರುವ ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುವುದಾಗಿ ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಹೇಳುತ್ತಾ ರಾಜಕಾರಣ ಮಾಡಲು ಹೊರಟಿದ್ದಾರೆ’ ಎಂದು ಟೀಕಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸಂವಿಧಾನದ ಬಗ್ಗೆ ಅರಿವೂ ಇಲ್ಲ. ಅವರು ಮೊದಲು ಆರ್.ಎಸ್.ಎಸ್.ನ ‘ಚಿಂತನಾಗಂಗಾ’ ಪುಸ್ತಕ ಓದಲಿ, ಆಮೇಲೆ ಮಾತನಾಡಲಿ. ‘ರಾಜ್ಯಗಳ ಅಸ್ತಿತ್ವಗಳನ್ನೇ ಅಳಿಸಬೇಕು. ಒಂದು ದೇಶ, ಒಂದು ರಾಜ್ಯ, ಒಂದು ಶಾಸಕಾಂಗ ಒಂದು ಕಾರ್ಯಾಂಗ ಎಂದು ಘೋಷಿಸಬೇಕು. ಏಕಾತ್ಮಕ ಸರ್ಕಾರದ ಪದ್ಧತಿ ಸ್ಥಾಪಿಸುವಂತೆ ಸಂವಿಧಾನ ಪುನಃ ಬರೆದಿಡೋಣ‘ ಎಂದು ಚಿಂತನಾಗಂಗಾ ಪುಸ್ತಕದ ಪುಟ ಸಂಖ್ಯೆ 271ರಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಈಗ ಹೇಳಿ, ಯಾರ ಪ್ರತಿಕೃತಿ ದಹಿಸಬೇಕು. ರಾಜ್ಯಗಳ ಅಸ್ತಿತ್ವವನ್ನೇ ಕಸಿದುಕೊಂಡು ಸಂವಿಧಾನವನ್ನು ಬದಲಾಯಿಸಬೇಕು ಎಂಬ ಮಾತುಗಳನ್ನು ಬಿಜೆಪಿಯವರೇ ಆಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಪ್ರಮುಖರಾದ ಕಲಗೋಡು ರತ್ನಾಕರ, ಹುಂಚದಕಟ್ಟೆ ಆದರ್ಶ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.