ADVERTISEMENT

ಮಹಿಳೆ– ಮಕ್ಕಳಿಗೆ ಸಂಬಂಧಿಸಿದ ಪ್ರಕರಣ ಇತ್ಯರ್ಥಗೊಳಿಸಿ: ಡಿಸಿ ಗುರುದತ್ತ ಹೆಗಡೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 7:04 IST
Last Updated 7 ಆಗಸ್ಟ್ 2025, 7:04 IST
ಗುರುದತ್ತ ಹೆಗಡೆ
ಗುರುದತ್ತ ಹೆಗಡೆ   

ಶಿವಮೊಗ್ಗ: ‘ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ಮಗುವಿನ ಮಾಹಿತಿ ಹೊಂದಿರಬೇಕು. ಮಹಿಳೆಯರು– ಮಕ್ಕಳಿಗೆ ಸಂಬಂಧಿಸಿದ ಯಾವುದೇ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಿ ಅವುಗಳ ಇತ್ಯರ್ಥಕ್ಕೆ ವಿಶೇಷವಾಗಿ ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಜಿಲ್ಲಾಡಳಿತದಿಂದ ನೈತಿಕ ಮತ್ತು ಕಾನೂನಾತ್ಮಕ ಬೆಂಬಲ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಏರ್ಪಡಿಸಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ತುರ್ತಾಗಿ ಕ್ರಮ ವಹಿಸಿ. ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಿರುವ ಕಡೆ ಡಿಡಿಪಿಐ ಕೂಡಲೇ ನಿರಾಕ್ಷೇಪಣಾ ಪತ್ರ ಕೊಟ್ಟು ಕಟ್ಟಡ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ, ಬಾಣಂತಿ ಮತ್ತು ಹಸುಕಂದಮ್ಮಗಳ ಮಾಹಿತಿ, ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳ ದಾಖಲೆ ನಿರ್ವಹಿಸುವಂತೆ ಸೂಚಿಸಿದ ಅವರು, ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸಾಂತ್ವನ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು. ಅಪೌಷ್ಟಿಕ ಮಕ್ಕಳ ಬಗ್ಗೆ ಮಾಹಿತಿ ಪಡೆದು, ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಕೌಟುಂಬಿಕ ಹಿಂಸೆಯಿಂದ ತೊಂದರೆಗೀಡಾದ ಮಹಿಳೆಯರು ಮೊಕದ್ದಮೆ ದಾಖಲಿಸಲು ನೆರವಾಗಬೇಕು. ಬಾಲ್ಯವಿವಾಹ ನಿಯಂತ್ರಣಕ್ಕೆ ಗಮನಹರಿಸಿ ಅವರನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್‌ ಮಾತನಾಡಿ, ‘ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಮಸ್ಯಾತ್ಮಕ ಮಕ್ಕಳ ಸಮಗ್ರ ವಿವರ ಹೊಂದಿರಬೇಕು. ಸಂಬಂಧಿತ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ. ಪ್ರತಿ ವಿಷಯದ ವಿಸ್ತೃತ ಚರ್ಚೆ ನಡೆದು, ಕ್ರಮ ಕೈಗೊಳ್ಳಬೇಕು’ ಎಂದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್. ಸಂತೋಷ್‌, ಡಿಡಿಪಿಐ ಎಸ್.ಆರ್. ಮಂಜುನಾಥ ಸ್ವಾಮಿ, ಡಿಎಚ್‌ಒ ಡಾ.ನಟರಾಜ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ, ಮಕ್ಕಳ ರಕ್ಷಣಾ ಸಮಿತಿಯ ಅಧ್ಯಕ್ಷ ತಾಜುದ್ದೀನ್‌ ಖಾನ್‌ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮೂರು ತಿಂಗಳ ಅವಧಿಯಲ್ಲಿ ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ 400ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಮಾತೃವಂದನಾ ಯೋಜನೆ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿರುವುದು ಅತ್ಯಂತ ಬೇಸರದ ಸಂಗತಿ ಎ
ನ್.ಹೇಮಂತ್‌ ಜಿ.ಪಂ ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.