ADVERTISEMENT

ಶಿವಮೊಗ್ಗ: ಒಳ ಮೀಸಲಾತಿ ಜಾರಿಗೆ ಆಗ್ರಹ; ಬೃಹತ್‌ ತಮಟೆ ಚಳವಳಿ ಸೆ.12ಕ್ಕೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 14:46 IST
Last Updated 9 ಸೆಪ್ಟೆಂಬರ್ 2024, 14:46 IST
ಎಂ. ಗುರುಮೂರ್ತಿ
ಎಂ. ಗುರುಮೂರ್ತಿ   

ಶಿವಮೊಗ್ಗ: ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸೆ.12ರಂದು ಬೃಹತ್‌ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ತಿಳಿಸಿದರು. 

ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳ ಮೀಸಲಾತಿ ಕಲ್ಪಿಸಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ನಿದ್ದೆಯಲ್ಲಿರುವ ಸರ್ಕಾರವನ್ನು ಬಡಿದೆಬ್ಬಿಸಲು ಜಿಲ್ಲಾಧಿಕಾರಿ ಕಚೇರಿ ಎದುರು ತಮಟೆ ಚಳವಳಿ ನಡೆಸಲಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಒಳ ಮೀಸಲಾತಿ ಜಾರಿಯಾಗುವರೆಗೂ ರಾಜ್ಯ ಸರ್ಕಾರವು ಎಲ್ಲ ಹೊಸ ನೇಮಕಾತಿಗಳನ್ನು ತಡೆಹಿಡಿಯಬೇಕು. ಬಾಕಿ ಉಳಿದಿರುವ ಬ್ಯಾಕ್‌ ಲಾಗ್‌ ಹುದ್ದೆಗಳನ್ನು ಭರ್ತಿ ಮಾಡಬೇಕು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮ ದಿನವಾದ ಜೂನ್‌ 9ರಂದು ಸರ್ಕಾರಿ ಕಾರ್ಯಕ್ರಮ ಆಚರಿಸಬೇಕು. ಕೃಷ್ಣಪ್ಪ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು ಎಂದು ಆಗ್ರಹಿಸಿದರು. 

ADVERTISEMENT

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ವಸತಿನಿಲಯ ಮತ್ತು ವಸತಿಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಸೇವೆ ಕಾಯಂಗೊಳಿಸಬೇಕು. ಬಗರ್‌ಹುಕುಂ ಸಾಗುವಳಿ ಸಕ್ರಮಗೊಳಿಸಿ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ಕೂಡಲೇ ಮುಂದಾಗಬೇಕು ಎಂದು ಮನವಿ ಮಾಡಿದರು. 

ಬಿ.ಎ. ಕಾಟ್ಕೆ, ಶಿವಬಸಪ್ಪ, ನಾಗರಾಜ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.