ADVERTISEMENT

ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು: ಶಾಸಕ ಚನ್ನಬಸಪ್ಪ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 5:13 IST
Last Updated 16 ಸೆಪ್ಟೆಂಬರ್ 2025, 5:13 IST
ಶಿವಮೊಗ್ಗ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನ ಪೀಠಿಕೆಯ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು
ಶಿವಮೊಗ್ಗ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನ ಪೀಠಿಕೆಯ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು    

ಶಿವಮೊಗ್ಗ: ‘ಜಾತಿ ಆಧಾರಿತ ವ್ಯವಸ್ಥೆ ಇರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರ್ಯ, ಕಲಿತ ಮೌಲ್ಯ, ಪಡೆದ ಅಧಿಕಾರವನ್ನು ಅದರ ರಕ್ಷಣೆಗಾಗಿಯೇ ಬಳಸುವ ಅಗತ್ಯವಿದೆ. ಅದು ಎಲ್ಲ ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಪುಷ್ಠೀಕರಿಸುತ್ತದೆ ಎಂಬ ನಂಬಿಕೆಯಿಂದಲೇ ಪ್ರಜಾಪ್ರಭುತ್ವ ದಿನ ಆಚರಣೆಗೆ ಮಹತ್ವ ಬಂದಿದೆ ಎಂದರು.

ವಿವಿಧತೆಯಲ್ಲಿ ಏಕತೆ ಕಾಣುವ ದೇಶದ ಬೆಳವಣಿಗೆಯನ್ನು ವಿಶ್ವವೇ ಬೆರಗುಗಣ್ಣಿನಿಂದ ನೋಡುತ್ತಿದೆ. ಇದುವೇ ಭಾರತದ ಸುವರ್ಣಕಾಲ. ಇದು ವಿಶ್ವಗುರುವಾಗುವ ಪುಣ್ಯಕಾಲ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಬಣ್ಣಿಸಿದರು.

ಜನಪರ ಮತ್ತು ಜನಸ್ನೇಹಿ ಆಡಳಿತ ನೀಡುವ ಜನಪ್ರತಿನಿಧಿ ಮತ್ತು ಪಕ್ಷಗಳನ್ನು ಮತದಾರರು ಆಯ್ಕೆಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು ಹೇಳಿದರು. 

ಶಾಲಾ– ಕಾಲೇಜು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕಿನ ಮಹತ್ವದ ಬಗ್ಗೆ ಅರಿವು ಮೂಡಿಸುವ ಕುರಿತ ಚಿತ್ರಕಲಾ ಸ್ಪರ್ಧೆ, ಚರ್ಚಾ ಸ್ಪರ್ಧೆ ಮತ್ತು ಛಾಯಾಚಿತ್ರ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಅಲ್ಲಮಪ್ರಭು ಉದ್ಯಾನದ ಸಂವಿಧಾನ ಪೀಠಿಕೆ ಪುತ್ಥಳಿ  ಸ್ಥಳದಿಂದ ಅಂಬೇಡ್ಕರ್ ಭವನದವರೆಗೆ ‘ನನ್ನ ಮತ ನನ್ನ ಹಕ್ಕು’ ಅಭಿಯಾನದ ಸೈಕಲ್ ಜಾಥಾ ನಡೆಯಿತು. ಅದಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. 

ಜಿಲ್ಲಾ ಪಂಚಾಯ್ತಿ ಸಿಇಒ ಎನ್.ಹೇಮಂತ್‌, ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಅಭಿಷೇಕ್‌, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮಲ್ಲೇಶಪ್ಪ, ಉಪನ್ಯಾಸಕ ಸುರೇಶ್‌ ಲಮಾಣಿ ಇದ್ದರು.

ಶಿವಮೊಗ್ಗ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತದಾನದ ಪ್ರತಿಜ್ಞಾವಿಧಿ ಸ್ವೀಕರಿಸಿದರು

ಮತದಾನಕ್ಕೆ ಗೈರು ಸೌಲಭ್ಯ ಕಡಿತಗೊಳಿಸಿ

‘ದೇಶದ ಜನರು ತಮ್ಮ ಹಕ್ಕುಗಳ ಬಳಸಿಕೊಳ್ಳುವಂತೆ ಕರ್ತವ್ಯಗಳನ್ನೂ ನಿರ್ವಹಿಸಬೇಕು. ಸಮರ್ಥ ಜನನಾಯಕನನ್ನು ಆಯ್ಕೆಗೊಳಿಸುವಲ್ಲಿ ಎಲ್ಲರೂ ಸಕ್ರಿಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಮತ ಚಲಾಯಿಸದವರಿಗೆ ಸರ್ಕಾರದ ಯಾವುದೇ ಸೌಲಭ್ಯವನ್ನು ನೀಡದಿರುವ ಕಾನೂನು ಜಾರಿಗೊಳ್ಳಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.