ಸಾಗರ: ಕಾರ್ಮಿಕರಲ್ಲದವರು ಸಹ ಕಾರ್ಮಿಕ ಕಾರ್ಡ್ ಪಡೆಯುತ್ತಿರುವುದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಕಾರ್ಮಿಕ ಕಾರ್ಡ್ ದುರ್ಬಳಕೆ ತಡೆಯುವತ್ತ ಕಾರ್ಮಿಕ ಇಲಾಖೆ ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದರು.
ಇಲ್ಲಿನ ನಗರಸಭೆ ಬಯಲು ರಂಗಮಂದಿರದಲ್ಲಿ ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಕಿಟ್ ವಿತರಿಸಿ ಅವರು ಮಾತನಾಡಿದರು.
ಶ್ರಮಿಕ ವರ್ಗಕ್ಕೆ ಸೇರಿರುವ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ರಾಜ್ಯ ಸರ್ಕಾರ ಹತ್ತು ಹಲವು ಸವಲತ್ತುಗಳನ್ನು ನೀಡುತ್ತಿದೆ. ಆದರೆ ಈ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬ ದೂರು ವ್ಯಾಪಕವಾಗಿದೆ. ಈ ವಿಷಯವನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಕಾರ್ಮಿಕರು ದೇಶದ ಆಸ್ತಿ ಇದ್ದಂತೆ. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸುವ ಕಾರ್ಮಿಕರು ಕೂಡ ಸಮಾಜದ ಮುಖ್ಯವಾಹಿನಿಯಲ್ಲಿರಬೇಕು. ಕಷ್ಟಪಟ್ಟು ದುಡಿಯುವ ಕಾರ್ಮಿಕರು ತಮ್ಮ ಕುಟುಂಬದ ಹಿತವನ್ನು ಗಮನದಲ್ಲಿಟ್ಟುಕೊಂಡು ಉಳಿತಾಯದ ಮನೋಭಾವ ಬೆಳೆಸಿಕೊಳ್ಳುವ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ನಿಗಾ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ಅನಾರೋಗ್ಯವಾದಾಗ ಚಿಕಿತ್ಸೆ ಸಂದರ್ಭದಲ್ಲಿ ಹೆಚ್ಚಿನ ಸೌಲಭ್ಯಗಳನ್ನು ದೊರಕಿಸುವತ್ತ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ತಾಲ್ಲೂಕು ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಕೆ.ಸಿದ್ದಪ್ಪ ಒತ್ತಾಯಿಸಿದರು.
ನಗರಸಭೆ ಸದಸ್ಯರಾದ ಮಧುಮಾಲತಿ, ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಿತಾಕುಮಾರಿ, ಪ್ರಮುಖರಾದ ಐ.ಎನ್.ಸುರೇಶ್ ಬಾಬು, ಕಲಸೆ ಚಂದ್ರಪ್ಪ, ವಿಲ್ಸನ್ ಗೊನ್ಸಾಲ್ವಿಸ್, ರವೀಂದ್ರ ಸಾಗರ್, ಮಂಜುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.