ADVERTISEMENT

ಪ್ರತಿ ವಾರ್ಡ್‌ಗಳಲ್ಲೂ ಸಭಾಭವನ ನಿರ್ಮಾಣಕ್ಕೆ ಒತ್ತು: ಬೇಳೂರು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 16:28 IST
Last Updated 15 ಏಪ್ರಿಲ್ 2025, 16:28 IST
ಸಾಗರದ ಅರಮನೆ ಕೇರಿಯಲ್ಲಿ ಬಿ.ಆರ್.ಅಂಬೇಡ್ಕರ್ ಸಭಾಭವನದ ಹೆಚ್ಚುವರಿ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭ ನಡೆಯಿತು
ಸಾಗರದ ಅರಮನೆ ಕೇರಿಯಲ್ಲಿ ಬಿ.ಆರ್.ಅಂಬೇಡ್ಕರ್ ಸಭಾಭವನದ ಹೆಚ್ಚುವರಿ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭ ನಡೆಯಿತು   

ಸಾಗರ: ನಗರ ವ್ಯಾಪ್ತಿಯ ಪ್ರತಿ ವಾರ್ಡ್‌ಗಳಲ್ಲೂ ಸಭಾಭವನ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. 

ನಗರದ ಅರಮನೆ ಕೇರಿಯಲ್ಲಿ ಬಿ.ಆರ್.ಅಂಬೇಡ್ಕರ್ ಸಭಾಭವನದ ಹೆಚ್ಚುವರಿ ಕಾಮಗಾರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಣ್ಣ ಗಾತ್ರದ ಸಭಾಭವನವಿದ್ದರೆ ಆರ್ಥಿಕವಾಗಿ ಹಿಂದುಳಿದವರಿಗೆ ಕಾರ್ಯಕ್ರಮ ನಡೆಸಲು ಸಹಾಯವಾಗುತ್ತದೆ ಎಂದರು. 

‘₹29 ಲಕ್ಷ ವೆಚ್ಚದಲ್ಲಿ ಅರಮನೆ ಕೇರಿಯ ಸಭಾಭವನವನ್ನು ಉನ್ನತೀಕರಣಗೊಳಿಸಲಾಗುತ್ತಿದೆ. ಅದೇ ರೀತಿ ನಗರದ ವಿವಿಧ ವಾರ್ಡ್‌ಗಳಲ್ಲಿ ಅಪೂರ್ಣಗೊಂಡಿರುವ ಸಭಾಭವನಗಳ ಕಾಮಗಾರಿಯನ್ನು ಚುರುಕುಗೊಳಿಸಲಾಗುವುದು’ ಎಂದು ಮಾಹಿತಿ ನೀಡಿದರು. 

ADVERTISEMENT

‘ನಗರದ ವಿವಿಧೆಡೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚುತ್ತಿದೆ. ಹೀಗೆ ಕಸ ಎಸೆಯುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಈ ಮೂಲಕ ಕಸ ಎಸೆಯುವವರನ್ನು ಗುರುತಿಸಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದರು. 

‘ಕೆಲವು ಬಡಾವಣೆಗಳಲ್ಲಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿವೆ. ಮಳೆಗಾಲ ಆರಂಭವಾಗುವುದರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು’ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು. 

ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಮಧುಮಾಲತಿ, ಎಲ್.ಚಂದ್ರಪ್ಪ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ನಾರಾಯಣ ಅರಮನೆಕೇರಿ, ಕಲಸೆ ಚಂದ್ರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.