
ಸೊರಬ: ‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿವೆ’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲ್ಲೂಕು ಸಮಿತಿ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಂಭಾಂಗಣದಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
‘ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆ ಸಾರ್ವಜನಿಕರ ಏಳ್ಗೆಗಾಗಿ ರೂಪಿತವಾಗಿದೆ. ತಾಲ್ಲೂಕಿನಲ್ಲಿ ಸಮರ್ಪಕವಾಗಿ ಅನುಷ್ಠಾನಗೊಂಡಿದ್ದು, ಈಗಾಗಲೇ ₹ 344.11 ಕೋಟಿ ವೆಚ್ಚ ಭರಿಸಲಾಗಿದೆ. ಸಚಿವ ಮಧು ಬಂಗಾರಪ್ಪ ಅವರ ನಿರ್ದೇಶನದ ಮೇರೆಗೆ ಪ್ರತಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆಗಳ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ತಾಲ್ಲೂಕಿನ ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಪಂಚ ಯೋಜನೆಗಳು ವಿಶೇಷವಾಗಿ ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ’ ಎಂದರು.
‘ಬಡವರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ವಿಳಂಬವಾಗಬಾರದು. ಅರ್ಹರಿಗೆ ಅನುಕೂಲವಾಗುವಂತೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನವು ಶೇ 100 ರಷ್ಟು ಪ್ರಗತಿ ಸಾಧಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ- ಸಾಗರ ಮಾರ್ಗದ ಸರ್ಕಾರಿ ಬಸ್‌ಗಳು ಖಾಸಗಿ ನಿಲ್ದಾಣಕ್ಕೆ ಸೀಮಿತವಾಗಿವೆ, ರಂಗನಾಥ ದೇವಾಲಯದ ಬಳಿ ಕಾಯುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಪ್ರಯಾಣಿಕರು ನಿತ್ಯವೂ ಆಟೊದವರಿಗೆ ₹ 60 ನೀಡಿ ಸರ್ಕಾರಿ ಬಸ್ ನಿಲ್ದಾಣ ತಲುಪಬೇಕಿದೆ. ಕೆಎಸ್ಆರ್‌ಟಿಸಿ ಅಧಿಕಾರಿಗಳು ಈ ಸಮಸ್ಯೆ ಬಗೆಹರಿಸಲಿ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಮುಖ್ತಿಯಾರ್ ಭಾಷಾ ಒತ್ತಾಯಿಸಿದರು.
ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಪ್ರಭಾಕರ್ ಶಿಗ್ಗಾ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಶ್ರೀರಾಮ್, ಸಮಿತಿ ಸದಸ್ಯರಾದ ಮುಖ್ತಿಯಾರ್ ಭಾಷಾ, ಸಂತೋಷ್ ಕೊರಕೋಡು, ಪಾಂಡು ಕೊಡಕಣಿ, ಅಭಿಷೇಕ್ ದ್ಯಾವನಹಳ್ಳಿ, ವಿನಾಯಕ ಬಿಳಗಲಿ, ಶಿವಪುತ್ರಪ್ಪ ತೆಲಗುಂದ, ಪ್ರವೀಣ್ ಕುಮಾರ್ ಶಾಂತಗೇರಿ, ರಾಮಪ್ಪ, ಉಷಾರಾಣಿ, ಮಂಜುನಾಥ ತಲಗಡ್ಡೆ, ಸುಜಾತಾ ಜೋತಾಡಿ, ಜೈಶೀಲಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.