ADVERTISEMENT

ನ್ಯಾಯಾಲಯದ ಆದೇಶ ಕಟ್ಟುನಿಟ್ಟಾಗಿ ಪಾಲಿಸಿ: ರವಿ ಕುಶಾಲಪ್ಪ ಸೂಚನೆ

ಅರಣ್ಯ ಒತ್ತುವರಿ ತೆರವು ಪ್ರಕರಣ

​ಪ್ರಜಾವಾಣಿ ವಾರ್ತೆ
Published 17 ಮೇ 2022, 4:00 IST
Last Updated 17 ಮೇ 2022, 4:00 IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಪಡೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಮಾತನಾಡಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಪಡೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಮಾತನಾಡಿದರು.   

ಶಿವಮೊಗ್ಗ: ಅರಣ್ಯ ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಪಡೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ಸೋಮವಾರ ನಡೆಸಿ ಮಾತನಾಡಿದರು.

ಒತ್ತುವರಿಗೆ ಸಂಬಂಧಿಸಿದಂತೆ ಶಿವಮೊಗ್ಗ ವಲಯದಲ್ಲಿ 12,700 ಪ್ರಕರಣಗಳಿದ್ದು 12,300 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ಭದ್ರಾವತಿ ವಲಯದಲ್ಲಿ 972 ಪ್ರಕರಣಗಳಿದ್ದು 18,049 ಎಕರೆ ಒತ್ತುವರಿಯಾಗಿದೆ. ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಯಾವುದೇ ಆದೇಶ ಅನುಷ್ಠಾನ ಜಿಲ್ಲೆಯಲ್ಲಿ ಬಾಕಿ ಇಲ್ಲ. ಇದೇ ರೀತಿ ಅರಣ್ಯ ಹಕ್ಕುಗಳಿಗಾಗಿ ಒಟ್ಟು 97,085 ಅರ್ಜಿಗಳನ್ನು ಸ್ವೀಕರಿಸಿದ್ದು, 2,444 ಪ್ರಕರಣಗಳಲ್ಲಿ 3,127 ಎಕರೆ ಜಮೀನಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನು 42,422 ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸೇರಿ ಅಕ್ರಮ ಚಟುವಟಿಕೆ ತಡೆಯುವ ನಿಟ್ಟಿನಲ್ಲಿ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಅರಣ್ಯ ಸಂರಕ್ಷಣೆ ಕುರಿತಾಗಿ ಅರಿವು ಮೂಡಿಸಲು ಗ್ರಾಮ ಅರಣ್ಯ ಸಮಿತಿಗಳನ್ನು ಇನ್ನಷ್ಟು ಸಕ್ರಿಯಗೊಳಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಾಗೃತಿ ಮೂಡಿದರೆ ಮಾತ್ರ ಅರಣ್ಯ ಸಂರಕ್ಷಣೆ ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಿದೆ ಎಂದು ಹೇಳಿದರು.

‘ಅರಣ್ಯ ಇಲಾಖೆ ವತಿಯಿಂದ ನಾಮಕಾವಸ್ತೆಗೆ ಗಿಡಗಳನ್ನು ನೆಟ್ಟರೆ ಪ್ರಯೋಜನವಿಲ್ಲ. ಸಮುದಾಯದ ಸಹಭಾಗಿತ್ವದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಆದಿವಾಸಿಗಳ ಹಾಡಿಗಳಲ್ಲಿ ವಿದ್ಯುತ್ ಸಂಪರ್ಕ ಸೇರಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡಬೇಕು. ಕಾವಾಡಿಗರು ಸೇವಾ ಭದ್ರತೆ ಒದಗಿಸುವ ಕುರಿತು ಮನವಿಯನ್ನು ನೀಡಿದ್ದು, ಈ ಕುರಿತು ಪರಿಶೀಲಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು’ ಎಂದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ‘ಜಿಲ್ಲೆಯಲ್ಲಿ ಅರಣ್ಯ ಇಲಾಖೆಗೆ ಒಳಪಟ್ಟ ಶೇ 90ರಷ್ಟು ಜಮೀನು ಸರ್ವೆ ಕಾರ್ಯ ಪೂರ್ಣಗೊಂಡಿದೆ. ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಜಮೀನು ಕುರಿತು ಗೊಂದಲ ಇಲ್ಲ. ಪಹಣಿ ಇಂಡೀಕರಣ ಕಾರ್ಯ ನಡೆಯುತ್ತಿದೆ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಶಿವಮೊಗ್ಗ ವಲಯ ಡಿಎಫ್‍ಒ ಶಂಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.