ಸಾಗರ: ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ಸಕಾಲದಲ್ಲಿ ಆಗುತ್ತಿಲ್ಲ ಎಂಬ ದೂರುಗಳು ವ್ಯಾಪಕವಾಗಿದೆ. ಎಲ್ಲಾ ಟೇಬಲ್‌ಗಳ ಮುಂದೆ ‘ನಾಳೆ ಬಾ’ ಎಂಬ ಫಲಕ ಹಾಕಿ ಬಿಡಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಖಾರವಾಗಿ ಹೇಳಿದರು.
ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ವಿವಿಧ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕು ಕಚೇರಿಯಲ್ಲೇ ಜನರ ಕೆಲಸ ಆಗದಿದ್ದರೆ ಉಳಿದ ಕಚೇರಿಗಳ ಬಗ್ಗೆ ಏನು ಹೇಳುವುದು ಎಂದು ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡರು.
ಆದಾಯ ಪ್ರಮಾಣಪತ್ರ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನ, ವಿಧವಾ ವೇತನ, ಸಂಧ್ಯಾಸುರಕ್ಷಾ ಮೊದಲಾದ ಸೌಲಭ್ಯ ಪಡೆಯಲು ಬರುವವರನ್ನು ಸತಾಯಿಸದೇ ಶೀಘ್ರವಾಗಿ ಕೆಲಸ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು.
ಗ್ರಾಮ ಲೆಕ್ಕಿಗರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಾರ್ವಜನಿಕರು ಫೋನ್ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ ಎಂಬ ದೂರುಗಳಿವೆ. ಇಲ್ಲಿ ಕೆಲಸ ಮಾಡಲು ಮನಸ್ಸಿಲ್ಲದಿದ್ದರೆ ಬೇರೆ ಕಡೆ ವರ್ಗ ಮಾಡಿಕೊಂಡು ಹೋಗಿ ಎಂದು ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ಕಾಣುತ್ತಿವೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬರುತ್ತಾರೆ. ಹೆದ್ದಾರಿ ಪ್ರಾಧಿಕಾರದವರು ಗುಂಡಿಗಳನ್ನು ಮುಚ್ಚಲು ತಕ್ಷಣ ಕ್ರಮ ಕೈಗೊಳ್ಳಲು ಅವರು ತಿಳಿಸಿದರು.
ಮೊರಾರ್ಜಿ ವಸತಿ ಶಾಲೆಗೆ ₹54 ಕೋಟಿ, ನಾಗವಳ್ಳಿ ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ₹50 ಲಕ್ಷ, ಒಳ ಚರಂಡಿ ಕಾಮಗಾರಿಗೆ ₹20 ಕೋಟಿ ಮಂಜೂರಾಗಿದೆ ಎಂದು ಮಾಹಿತಿ ನೀಡಿದ ಅವರು, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆಗೆ ವೇಗ ನೀಡಬೇಕು ಎಂದು ಸೂಚಿಸಿದರು.
ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ರಶ್ಮಿ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.