ADVERTISEMENT

ತಿಂಗಳ ಒಳಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರ, ಉಪಾಧ್ಯಕ್ಷರ ಆಯ್ಕೆ: ಕೆ.ಎಸ್‌.ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2020, 11:40 IST
Last Updated 31 ಡಿಸೆಂಬರ್ 2020, 11:40 IST
ಸಚಿವ ಕೆ.ಎಸ್‌.ಈಶ್ವರಪ್
ಸಚಿವ ಕೆ.ಎಸ್‌.ಈಶ್ವರಪ್   

ಶಿವಮೊಗ್ಗ: ತಿಂಗಳ ಒಳಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಬಳಿಕ ಅವರಿಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಿಕೆ ಕುರಿತು ತರಬೇತಿ ನೀಡಲಾಗುವುದು. ಗ್ರಾಮ ಪಂಚಾಯತ್ ವ್ಯವಸ್ಥೆ ಬಲಪಡಿಸಲು ನಿರಂತರ ತರಬೇತಿ ಹಮ್ಮಿಕೊಳ್ಳಲಾಗುವುದು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾಗಿರುವ ರಾಜ್ಯದ 92,131 ಸದಸ್ಯರಿಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಿಂದ ಜನವರಿ 19ರಿಂದ ಮಾರ್ಚ್ 26ರವರೆಗೆ ತಾಲ್ಲೂಕು ಹಂತದಲ್ಲಿ ತರಬೇತಿ ನೀಡಲಾಗುವುದು. ರಾಜ್ಯದ 176 ತಾಲ್ಲೂಕುಗಳ 285 ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ. ಕೆಲವು ಕಡೆ ಎರಡು ಕೇಂದ್ರಗಳನ್ನು ಗುರುತಿಸಲಾಗಿದೆ. 900 ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗಿದೆ. 40 ಸದಸ್ಯರಿಗೆ ಒಂದು ತಂಡ ರಚಿಸಲಾಗಿದೆ. ಪ್ರತಿ ತಂಡಕ್ಕೆ 5 ದಿನಗಳು ತರಬೇತಿ ನೀಡಲಾಗುವುದು ಎಂದರು.

ADVERTISEMENT

ಪ್ರತಿ ದಿನ ಬೆಳಿಗ್ಗೆ 10.30ರಿಂದ ಸಂಜೆ 4ರವರೆಗೆ ತರಬೇತಿ ನಡೆಯಲಿದೆ. 15 ವಿಷಯಾಧಾರಿತ ಅಧಿವೇಶನಗಳು ಮತ್ತು ಕೌಶಲ ಮಾಹಿತಿ ನೀಡಲಾಗುವುದು. ಸದಸ್ಯರಿಗೆ ಪ್ರಯಾಣ ಭತ್ಯೆ, ಭಾಗವಹಿಸುವಿಕೆ ಭತ್ಯೆ ನೀಡಲಾಗುವುದು. ತರಬೇತಿಗೆ ಅಂದಾಜು ₹ 27.16 ಕೋಟಿ ವೆಚ್ಚವಾಗಲಿದೆ ಎಂದು ವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.