ಸಾಗರ: ಅರಣ್ಯಭೂಮಿ ಹಕ್ಕು ಕಾಯ್ದೆ ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸುವ ಸಂಬಂಧ ಶೀಘ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರೊಂದಿಗೆ ಭೇಟಿಯಾಗಿ ಚರ್ಚಿಸಲಾಗುವುದು ಎಂದು ರಾಜ್ಯ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದು.
ಅರಣ್ಯಭೂಮಿ ಹಕ್ಕು ಕಾಯ್ದೆ ಕುರಿತು ಬುಧವಾರ ಇಲ್ಲಿನ ಕಾಗೋಡು ತಿಮ್ಮಪ್ಪ ಅವರ ನಿವಾಸದಲ್ಲಿ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಅರಣ್ಯಭೂಮಿ ಹಕ್ಕು ಕಾಯ್ದೆ ಅನುಷ್ಠಾನದಲ್ಲಿ ಹಲವು ರೀತಿಯ ವೈಫಲ್ಯಗಳನ್ನು ಎದುರಿಸುವಂತಾಗಿದೆ. ಕಾನೂನಿನ ವಿಧಾನಗಳನ್ನು ಅನುಸರಿಸದೇ ಅರ್ಜಿಗಳನ್ನು ವಿಲೇ ಮಾಡಲಾಗುತ್ತಿದೆ. ಈ ವಿಷಯವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
‘ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಅರಣ್ಯ ಹಕ್ಕು ಕಾಯ್ದೆಯನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವಶ್ಯಕವಲ್ಲದ ದಾಖಲೆಗಳನ್ನು ಒದಗಿಸುವಂತೆ ಫಲಾನುಭವಿಗಳಿಗೆ ಸೂಚಿಸಲಾಗುತ್ತಿದೆ. ಇಂತಹ ತೊಡಕುಗಳನ್ನು ನಿವಾರಿಸಲು ಸರ್ಕಾರದಿಂದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.