ADVERTISEMENT

ಸರ್ಕಾರಿ ಕಚೇರಿಗಳಲ್ಲಿ ಹೆಚ್ಚಿದ ಭ್ರಷ್ಟಾಚಾರ: ಗೋಪಾಲಕೃಷ್ಣ ಬೇಳೂರು

ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 3:32 IST
Last Updated 12 ಅಕ್ಟೋಬರ್ 2021, 3:32 IST
ಗೋಪಾಲಕೃಷ್ಣ
ಗೋಪಾಲಕೃಷ್ಣ   

ಸಾಗರ: ‘ತಾಲ್ಲೂಕಿನ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಲಂಚ ಕೊಡದೇ ಯಾವ ಕೆಲಸವೂ ಆಗುತ್ತಿಲ್ಲ. ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳುಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ’ ಎಂದು ಕೆಪಿಸಿಸಿ ವಕ್ತಾರಗೋಪಾಲಕೃಷ್ಣ ಬೇಳೂರು ಆರೋಪಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನ ಸರ್ಕಾರಿ ಕಚೇರಿಗಳಲ್ಲಿನ ಅವ್ಯವಸ್ಥೆ ಕುರಿತು ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ಹೆಚ್ಚಿನ ಕಚೇರಿಗಳಲ್ಲಿ ದೀರ್ಘಕಾಲದಿಂದ ಅದೇ ಅಧಿಕಾರಿಗಳು, ನೌಕರರು ಠಿಕಾಣಿ ಹೂಡಿದ್ದು, ಅವರನ್ನು ನಿಯಂತ್ರಿಸಲು ಸಾಧ್ಯವಾಗದ ವಾತಾವರಣ ನಿರ್ಮಾಣವಾಗಿದೆ’ ಎಂದು ದೂರಿದರು.

‘ಒಂದು ವಾರದಿಂದ ನಗರವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ತಾಯಿ-ಮಗು ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲೂ ನೀರಿಲ್ಲ. ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಬಿಜೆಪಿಯ ನಗರಸಭಾ ಸದಸ್ಯರೊಬ್ಬರು ಅಪಘಾತಕ್ಕೆ ಈಡಾಗಿದ್ದಾರೆ. ಇಂತಹ ಸಣ್ಣಪುಟ್ಟ ವಿಷಯಗಳನ್ನು ಸರಿಪಡಿಸಲಾಗದ ಶಾಸಕರು ಮತ್ತು ನಗರಸಭೆ ಪ್ರಮುಖರು ಕಣ್ಣುಮುಚ್ಚಿ ಕುಳಿತಿದ್ದಾರೆ’ ಎಂದು ಟೀಕಿಸಿದರು.

ADVERTISEMENT

‘ತಾಲ್ಲೂಕಿನ ಆವಿನಹಳ್ಳಿ ಗ್ರಾಮದಲ್ಲಿ ಬಿಜೆಪಿ ಮಹಿಳಾ ಮುಖಂಡರೊಬ್ಬರ ಮನೆಯಲ್ಲಿ ಕಾರ್ಮಿಕರಿಗೆ ವಿತರಿಸಬೇಕಾದ ಕಿಟ್ ಪತ್ತೆಯಾಗಿದೆ. ಸರ್ಕಾರದಿಂದ ಬಂದ ಸೌಲಭ್ಯಗಳನ್ನು ಬಿಜೆಪಿ ಮುಖಂಡರು ದುರುಪಯೋಗ ಮಾಡಿಕೊಳ್ಳುತ್ತಿರುವುದು ಕೀಳುಮಟ್ಟದ ರಾಜಕೀಯ’ ಎಂದು ದೂರಿದರು.

ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆಯ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಿ.ವೈ.ರಾಘವೇಂದ್ರ ಹಾಗೂ ಬಿ.ವೈ. ವಿಜಯೇಂದ್ರ ಹೇಳುತ್ತಿದ್ದ ಕೆಲಸ ಮಾಡುತ್ತಿದ್ದರು. ಯಡಿಯೂರಪ್ಪ ಹಾಗೂ ಅವರ ಮಕ್ಕಳನ್ನು ನಿಯಂತ್ರಿಸುವ ಉದ್ದೇಶದಿಂದಲೇ ದಾಳಿ ನಡೆದಿದೆ’ ಎಂದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಷಡಾಕ್ಷರಿ ಅವರು ಬಿಜೆಪಿ ಮುಖಂಡರನ್ನು ಬಳಸಿಕೊಂಡು ದೊಡ್ಡಮಟ್ಟದಲ್ಲಿ ಅಕ್ರಮ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದರು.

‘ಶಾಸಕ ಹಾಲಪ್ಪ ಹರತಾಳು ಅವರು ಕಾಂಗ್ರೆಸ್‌ನ ಕೆಲವು ಮುಖಂಡರನ್ನು ನನ್ನ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ಆದರೆ ಜನರ ಜೊತೆ ನಾನು ಇದ್ದೇನೆ, ನನ್ನ ರಾಜಕೀಯ ಬೆಳವಣಿಗೆಗೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ’ ಎಂದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಐ.ಎನ್. ಸುರೇಶ್ ಬಾಬು, ಗಣಪತಿ ಮಂಡಗಳಲೆ, ಮಹಾಬಲ ಕೌತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.