
ಶಿವಮೊಗ್ಗ: ‘ಕರ್ನಾಟಕ ರಾಜ್ಯೋತ್ಸವ ಕೇವಲ ಘೋಷಣೆ- ಭಾಷಣಗಳಿಗೆ ಸೀಮಿತಗೊಳ್ಳದೇ ಕನ್ನಡದ ಅಸ್ಮಿತೆಯ ಜಾಗೃತಿಗೆ ವೇದಿಕೆಯಾಗಬೇಕು. ಯಾವುದೇ ಜಾತಿ ಮತ, ಭಾಷೆ-ಬಣ್ಣಗಳ ಹಂಗಿಲ್ಲದೆ ಕನ್ನಡತನವನ್ನು ಸಂಭ್ರಮಿಸುವ ಹಬ್ಬ ಇದಾಗಿದೆ’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಇಲ್ಲಿನ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಭ್ರಮದ ಈ ದಿನ ನಾವೆಲ್ಲರೂ ಕನ್ನಡದ ಉಳಿವಿಗೆ ಸಂಕಲ್ಪ ಮಾಡಬೇಕಾಗಿದೆ ಎಂದರು.
‘ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ತನ್ನದೇ ವಿಶಿಷ್ಟತೆ ಹೊಂದಿದೆ. ಹಲವಾರು ಜನಪರ ಚಳವಳಿಗಳ ಹುಟ್ಟು ಹಾಕಿದ ಈ ನೆಲ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ ಶ್ರೀಮಂತವಾಗಿದೆ’ ಎಂದರು.
ಅನುಭವ ಮಂಟಪದ ಅಲ್ಲಮಪ್ರಭು ಬಳ್ಳಿಗಾವಿಯವರು. ಶಿವಶರಣೆ ಅಕ್ಕಮಹಾದೇವಿ ಉಡುತಡಿಯವರು. ಕನ್ನಡ ಸಾರಸ್ವತ ಲೋಕಕ್ಕೆ ಕುವೆಂಪು, ಜಿ.ಎಸ್. ಶಿವರುದ್ರಪ್ಪ ಅವರಂತಹ ರಾಷ್ಟ್ರಕವಿಗಳನ್ನು ಕೊಟ್ಟ ಹಿರಿಮೆ ಅಷ್ಟೇ ಅಲ್ಲ ಕುವೆಂಪು ಮತ್ತು ಯು.ಆರ್. ಅನಂತಮೂರ್ತಿ ಅವರಂತಹ ಇಬ್ಬರು ಜ್ಞಾನಪೀಠ ಪುರಸ್ಕೃತರನ್ನು, ಮೂರು ಜನ ಮುಖ್ಯಮಂತ್ರಿಗಳನ್ನು ಈ ನಾಡಿಗೆ ನೀಡಿದ ಹಿರಿಮೆ ಶಿವಮೊಗ್ಗ ಜಿಲ್ಲೆಯದ್ದು ಎಂದು ಸ್ಮರಿಸಿದರು.
ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಿದ ನಮ್ಮ ನಾಡು ಎಲ್ಲಾ ಜಾತಿ ಧರ್ಮಗಳ ಜನರು ಸಾಮರಸ್ಯದಿಂದ ಬದುಕುವ ಒಂದು ಸುಂದರ ತೋಟವಾಗಿಯೇ ಉಳಿಯಬೇಕು ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಪಾಲ್ಗೊಂಡಿದ್ದರು. ಇದಕ್ಕೂ ಮುಂಚೆ ನಗರದ ಸೈನ್ಸ್ ಮೈದಾನದಿಂದ ನೆಹರೂ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ಪಿ ಜಿ.ಕೆ. ಮಿಥುನ್‌ಕುಮಾರ್, ಭಾರತ ಸೇವಾದಳದ ವೈ.ಎಚ್.ನಾಗರಾಜ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.