ಶಿವಮೊಗ್ಗ: ಜಿಲ್ಲೆಯಲ್ಲಿ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಸೋಮವಾರ ಇಲ್ಲಿನ ಬಿಇಒ ಕಚೇರಿ ಆವರಣದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಉಪನಿರ್ದೇಶಕಿ ಶೋಭಾ ಅವರಿಗೆ ಗಣತಿ ಕಾರ್ಯದ ಕಿಟ್ ಹಸ್ತಾಂತರದ ಮೂಲಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಗೆ ರಾಜ್ಯದಲ್ಲಿ ಎಲ್ಲ ರೀತಿಯ ತಯಾರಿ ನಡೆಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಒಳಮೀಸಲಾತಿ ಜಾರಿಗೆ ತಂದೆವು. ಈಗ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಮಾಡಲು ಮುಂದಾಗಿದ್ದೇವೆ. ಈ ಮೂಲಕ ಮತದಾರರಿಗೆ ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳುತ್ತಿದೆ ಎಂದರು.
ಈಗಾಗಲೇ ಸರ್ಕಾರದ ಆದೇಶದಂತೆ ಸಮೀಕ್ಷೆಗೆ ನನ್ನ ಇಲಾಖೆಯಿಂದ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ 1 ಕೋಟಿ ಮನೆಗಳಿವೆ. ಜಿಲ್ಲೆಯಲ್ಲಿ 5.50 ಲಕ್ಷ ಮನೆಗಳಿದ್ದು, 4,000 ಶಿಕ್ಷಕರನ್ನು ನೇಮಿಸಲಾಗಿದೆ. ಜಿಲ್ಲಾಡಳಿತ ಯಾವುದೇ ರೀತಿ ಸಮಸ್ಯೆಯಾಗದಂತೆ ಸಮೀಕ್ಷೆ ನಡೆಸಬೇಕು. ಸಮಸ್ಯೆ ಎದುರಾದರೆ ಇಲಾಖೆಯ ಕಾರ್ಯದರ್ಶಿ ಅಥವಾ ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತರ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು ಎಂದರು.
ಸಾಮಾನ್ಯ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಮೀಕ್ಷೆ ಮಾಡಲು ಮುಂದಾಗಿದ್ದಾರೆ. ಸೆ.22 ರಿಂದ ಅ.7ರ ವರೆಗೆ ಸಮೀಕ್ಷೆ ನಡೆಯಲಿದೆ. ವಿರೋಧ ಪಕ್ಷಗಳ ಮಾತಿಗೆ ಕಿವಿಗೊಡದೇ ಜಿಲ್ಲೆಯ ಜನರು ಸಮೀಕ್ಷೆಗೆ ಸಹಕರಿಸಬೇಕು. ಸರಿಯಾದ ಮಾಹಿತಿ ನೀಡಬೇಕು. ಇದರಿಂದ ನಿಮ್ಮ ಹಕ್ಕಗಳನ್ನು ಪಡೆದುಕೊಳ್ಳಲು ಒಂದು ವ್ಯವಸ್ಥೆ ನಿರ್ಮಾಣವಾದಂತಾಗುತ್ತದೆ ಎಂದು ಹೇಳಿದರು.
ನಿಗದಿತ ದಿನದೊಳಗೆ ಸಮೀಕ್ಷೆ ಪೂರ್ಣಗೊಳಿಸುವುದಾಗಿ ಶಿಕ್ಷಕರು ಭರವಸೆ ನೀಡಿದ್ದಾರೆ. ಅದು ಆಗದಿದ್ದರೆ ಸಮೀಕ್ಷಾ ಅವಧಿ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಈ ವೇಳೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಾಂಗ್ರೆಸ್ ಮುಖಂಡ ಕಲಗೋಡು ರತ್ನಾಕರ, ಶಿವಮೊಗ್ಗ ಬಿಇಒ ರಮೇಶ್ ನಾಯಕ್ ಹಾಜರಿದ್ದರು.
ಸಂವಿಧಾನದ ಜಾತ್ಯತೀತ ಆಶಯದಂತೆ ಲೇಖಕಿ ಬಾನು ಮುಷ್ತಾಕ್ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ದಾರೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪು ದೇಶಕ್ಕೆ ಮಾದರಿಯಾಗಿದೆ–ಮಧು ಬಂಗಾರಪ್ಪ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ
ಅಡಿಕೆ ಬೆಳೆ: 83 ಸಾವಿರ ಎಕರೆಗೆ ಹಾನಿ
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಕೊಳೆ ರೋಗ ಬಾಧಿತವಾಗಿ 83000 ಎಕರೆ ಪ್ರದೇಶದಲ್ಲಿ ಅಡಿಕೆ ಬೆಳೆ ಹಾನಿಗೀಡಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಸರ್ಕಾರಕ್ಕೆ ವರದಿ ಕೊಟ್ಟು ₹80 ಕೋಟಿ ಪರಿಹಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ರೈತರ ನೆರವಿಗೆ ಬರುವಂತೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.