ಶಿವಮೊಗ್ಗ: ಪೋಷಕರಿಂದ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 171 ಶಾಲೆಗಳಲ್ಲಿ ಕನ್ನಡದ ಜೊತೆ ಇಂಗ್ಲಿಷ್ ಮಾಧ್ಯಮವನ್ನು ತೆರೆಯಲು ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು.
ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ 79 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರದ ಫಲವಾಗಿ ಹೆಚ್ಚಿನ ಸಂಖ್ಯೆಯ ಮಕ್ಕಳು ಸರ್ಕಾರಿ ಶಾಲೆಗಳತ್ತ ಬರಲಿದ್ದಾರೆ ಎಂದರು.
ದೇಶದಲ್ಲಿಯೇ ಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿ 'ಅಂಧತ್ವಮುಕ್ತ ಶಿವಮೊಗ್ಗ' ಅಭಿಯಾನ ಅನುಷ್ಠಾನಗೊಳಿಸಲಾಗಿದೆ ಎಂದರು.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯನ್ನು ಉನ್ನತೀಕರಿಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಿ ಪರಿವರ್ತಿಸಲಾಗುತ್ತಿದೆ. 50 ಹಾಸಿಗೆಗಳ ಕ್ರಿಟಿಕಲ್ ಕೇರ್ ಯೂನಿಟ್ ಮತ್ತು ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ (ಐಪಿಎಚ್ ಎಲ್) ಕಟ್ಟಡ ಕಾಮಗಾರಿಗೆ ಶೀಘ್ರ ಚಾಲನೆ ದೊರೆಯಲಿದೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಮ್ಸ್) ಪರಿಶಿಷ್ಟ ಜಾತಿ ಹಾಗೂ ಪಂಗಡದ ವೈದ್ಯಕೀಯ ವಿದ್ಯಾರ್ಥಿಗಳಿಗೆ 100 ಹಾಸಿಗೆಯ ವಸತಿ ನಿಲಯ ಮಂಜೂರು ಆಗಿದ್ದು, ಕಟ್ಟಡದ ಕಾಮಗಾರಿ ಆರಂಭವಾಗಿದೆ ಎಂದರು.
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನದಿಂದ ರಾಜ್ಯದ ಪ್ರತೀ ಕುಟುಂಬವೂ ವಾರ್ಷಿಕ ₹50 ಸಾವಿರ ಮೊತ್ತದ ಸವಲತ್ತುಗಳನ್ನು ನೇರವಾಗಿ ಪಡೆಯುತ್ತಿವೆ. ಇದರಿಂದ ಜನರ ಜೀವನದಲ್ಲಿ ಸುಧಾರಣೆ ಕಂಡಿದೆ ಎಂದರು.
ಶಿವಮೊಗ್ಗ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ತಲಾ 25 ಮೀನುಗಾರರ ಕುಟುಂಬಗಳಿಗೆ ಮನೆಗಳ ಮಂಜೂರು ಮಾಡಲಾಗಿದೆ. ಸೊರಬ ಹಾಗೂ ಭದ್ರಾವತಿ ಕ್ಷೇತ್ರಗಳಲ್ಲಿ ಹೊಸದಾಗಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ₹307.80 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಅಮೃತ್ ಯೋಜನೆಯಡಿ ಶಿರಾಳಕೊಪ್ಪ, ಶಿಕಾರಿಪುರ, ಹೊಳೆಹೊನ್ನೂರು, ಜೋಗ-ಕಾರ್ಗಲ್, ಹೊಸನಗರ, ತೀರ್ಥಹಳ್ಳಿ, ಪಟ್ಟಣ ಪಂಚಾಯ್ತಿ , ಪುರಸಭೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಕುಂಸಿ-ಗಾಜನೂರು ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ₹125 ಕೋಟಿಗೆ ಅನುಮೋದನೆ ದೊರೆತಿದೆ ಎಂದು ಹೇಳಿದರು.
ಧ್ವಜಾರೋಹಣ ನಂತರ ಕವಾಯತು ವೀಕ್ಷಿಸಿ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದ ಮಧು ಬಂಗಾರಪ್ಪ, ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಿದರು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಮಾರಂಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಸಿಇಒ ಎನ್.ಹೇಮಂತ್ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
12 ವರ್ಷಗಳ ನಂತರ ನೆಹರೂ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನ ಆಚರಣೆ
2013 ರಿಂದ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಶಿವಮೊಗ್ಗದ ಸಾಗರ ರಸ್ತೆಯ ಡಿಎಆರ್ ನ ಕವಾಯತು ಮೈದಾನದಲ್ಲಿ ನಡೆಯುತ್ತಿದ್ದವು. 12 ವರ್ಷಗಳ ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪುನರ್ ಆರಂಭವಾಗಿದ್ದು, ಮಳೆಯ ನಡುವೆಯೇ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಶಾಲಾ ಮಕ್ಕಳು, ಪೋಷಕರು ಕ್ರೀಡಾಂಗಣದಲ್ಲಿ ನೆರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.