
ಸಾಗರ: ‘ಕರ್ನಾಟಕ ವಿದ್ಯುತ್ ನಿಗಮಕ್ಕೆ ಸೇರಿದ ಪ್ರದೇಶವನ್ನು ನಿಮಗೆ ಮಂಜೂರು ಮಾಡಿಸಿಕೊಡುತ್ತೇವೆ ಎಂದು ಹೇಳಿ ಕೆಲವರು ರೈತರಿಂದ ಹಣ ವಸೂಲಿ ಮಾಡುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಈ ರೀತಿ ಹಣ ಕೊಟ್ಟು ರೈತರು ಮೋಸ ಹೋಗಬಾರದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಸಿದ್ದಾರೆ.
ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ‘ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ತಾಲ್ಲೂಕಿನ ತುಮರಿ ಭಾಗದ ಕೆಲವರಿಂದ ಭೂ ಮಂಜೂರಾತಿ ಮಾಡಿಸಿಕೊಡುವುದಾಗಿ ರೈತರಿಂದ ಹಣ ಎತ್ತಿರುವ ಮಾಹಿತಿಯಿದೆ. ಇಂತಹ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ’ ಎಂದರು.
‘ತಾಲ್ಲೂಕಿನಲ್ಲಿ ಜಲ ವಿದ್ಯುತ್ ಯೋಜನೆಗಾಗಿ ಅಣೆಕಟ್ಟು ನಿರ್ಮಿಸಿದ ಸಂದರ್ಭದಲ್ಲಿ ಒಂದಿಷ್ಟು ಪ್ರದೇಶದ ಭೂಮಿಯನ್ನು ಕರ್ನಾಟಕ ವಿದ್ಯುತ್ ನಿಗಮದ ವಶಕ್ಕೆ ನೀಡಲಾಗಿದೆ. ಅದನ್ನು ಮರಳಿ ಸಂತ್ರಸ್ತರಿಗೆ ನೀಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಆದಾಗ್ಯೂ ಕೆಲವು ಮಧ್ಯವರ್ತಿಗಳು ಸಂತ್ರಸ್ತ ರೈತರನ್ನು ಹಾದಿ ತಪ್ಪಿಸುತ್ತಿದ್ದಾರೆ. ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು’ ಎಂದು ಮನವಿ ಮಾಡಿದರು.
ಶಿವಮೊಗ್ಗ ರಸ್ತೆಯ ತ್ಯಾಗರ್ತಿ ವೃತ್ತದಿಂದ ಜೋಗ ರಸ್ತೆಯ ಎಲ್ ಬಿ ಕಾಲೇಜು ವೃತ್ತದವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ವಿಸ್ತರಣೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಅದನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ನಗರ ಪೊಲೀಸ್ ಠಾಣೆ ಕಟ್ಟಡ ಇರುವ ಪ್ರದೇಶ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲೇ ಬರುತ್ತಿದ್ದು, ರಸ್ತೆ ವಿಸ್ತರಣೆ ಕಾರಣ ಠಾಣೆ ಕಟ್ಟಡವನ್ನು ಬೇರೆಡೆ ಸ್ಥಳಾಂತರಿಸಲಾಗುವುದು. ಈಗಾಗಲೇ ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿ ಈ ಸಂಬಂಧ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಮಾರ್ಕೆಟ್ ರಸ್ತೆ ವಿಸ್ತರಣೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ರೈಲ್ವೆ ನಿಲ್ದಾಣ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಬೇಕು. ಅಗ್ರಹಾರ, ಶಿವಪ್ಪನಾಯಕ ವೃತ್ತವನ್ನು ಅಭಿವೃದ್ಧಿ ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಲೋಕೇಶ್, ರಾಕೇಶ್, ದೇವರಾಜ್, ಗೋಪಿನಾಥ್, ಶಾಸಕರ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ.ರಮೇಶ್ ಇದ್ದರು.
‘ಸಚಿವ ಸ್ಥಾನ ಸಿಗುವ ನಿರೀಕ್ಷೆ’
‘ಮೂರನೇ ಬಾರಿ ಶಾಸಕನಾಗಿರುವುದರಿಂದ ಈ ಬಾರಿ ರಾಜ್ಯದ ಸಚಿವ ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಮುಖ್ಯಮಂತ್ರಿ ಬದಲಾವಣೆ ವಿಷಯ ಹೈಕಮಾಂಡ್ ತೀರ್ಮಾನಕ್ಕೆ ಬಿಡಲಾಗಿದೆ. ಪಕ್ಷದ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ಸಾಗರಕ್ಕೆ ಜಿಲ್ಲಾ ಕೇಂದ್ರದ ಮಾನ್ಯತೆ ನೀಡಬೇಕು ಎಂಬ ವಿಷಯಕ್ಕೆ ನನ್ನ ಬೆಂಬಲವಿದೆ’ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.