ADVERTISEMENT

ಮತಾಂತರ ತಡೆಗೆ ವಿಶೇಷ ಕಾನೂನು: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 3:56 IST
Last Updated 3 ಅಕ್ಟೋಬರ್ 2021, 3:56 IST
ಕೆ.ಎಸ್‌.ಈಶ್ವರಪ್ಪ
ಕೆ.ಎಸ್‌.ಈಶ್ವರಪ್ಪ   

ಶಿವಮೊಗ್ಗ: ರಾಜ್ಯದಲ್ಲಿ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿದ್ದು, ತಡೆಗೆ ವಿಶೇಷ ಕಾನೂನು ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಡತನವನ್ನೇ ಬಂಡವಾಳ ಮಾಡಿಕೊಂಡಿರುವ ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಮತಾಂತರ ತಡೆಗಟ್ಟಲು ದಿಟ್ಟ ಹೆಜ್ಜೆ ಇಡುತ್ತೇವೆ. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಬಲವಂತದ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ’ ಎಂದರು.

‘ದೇಶದಲ್ಲಿ ಬಿಜೆಪಿ ಸಾಕಷ್ಟು ಬೆಳೆದಿದೆ. ಕಾರ್ಯಕರ್ತರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಉಪ ಚುನಾವಣೆಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಷಾಗಿರುವುದು ಸ್ವಾಭಾವಿಕ. ಬಿಜೆಪಿ ಕಾರ್ಯಕರ್ತರಲ್ಲಿ ಗೆಲುವಿನ ಹುಮ್ಮಸ್ಸು ಹೆಚ್ಚಾಗಿರುವ ಕಾರಣ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಎರಡೂ ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಭಾನುವಾರ ಬೆಂಗಳೂರಿನಲ್ಲಿ ಎರಡೂ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಿಂದಗಿ, ಹಾನಗಲ್ ಎರಡು ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಮಾಡಲಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಮೀಸಲಾತಿ ಕುರಿತು ಜಯಮೃತ್ಯುಂಜಯ ಸ್ವಾಮೀಜಿ ಅವರು ಮುಖ್ಯಮಂತ್ರಿ ಜೊತೆಗೆ ಮಾತುಕತೆ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗ ನೀಡುವ ವರದಿ ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.