ಭದ್ರಾವತಿ: ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣ ವಿಭಾಗದ ಪದವಿ ಫಲಿತಾಂಶವನ್ನು ಪರೀಕ್ಷೆ ನಡೆಸದೇ ಪ್ರಕಟಿಸುವ ಆದೇಶ ಹೊರಡಿಸಿರುವ ಕುಲಪತಿ ಧೋರಣೆ ವಿರುದ್ಧ ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ಮಂಗಳವಾರ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ತೆರಳಿದ್ದ ನಿಯೋಗವು, ‘ಸಿಂಡಿಕೇಟ್ ನಿರ್ಣಯವನ್ನು ಧಿಕ್ಕರಿಸಿ ಕುಲಪತಿ ಅವರು ನಿರ್ಣಯ ತೆಗೆದುಕೊಳ್ಳುವ ಮೂಲಕ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಇವರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿ ಮನವಿ ಸಲ್ಲಿಸಿತು.
ಮನವಿ ಸ್ವೀಕರಿಸಿದ ರಾಜ್ಯಪಾಲರು, ವಿಷಯವನ್ನು ಸಮಗ್ರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ನಿಯೋಗದಲ್ಲಿದ್ದ ಸಿಂಡಿಕೇಟ್ ಸದಸ್ಯ ಜಿ. ಧರ್ಮಪ್ರಸಾದ್ ತಿಳಿಸಿದ್ದಾರೆ.
ಸಚಿವರ ಭೇಟಿ: ರಾಜ್ಯಪಾಲರ ಭೇಟಿ ನಂತರ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಅವರನ್ನೂ ಭೇಟಿ ಮಾಡಿ ನಿಯೋಗವು ಮನವಿ ಸಲ್ಲಿಸಿತು.
ಈ ಕುರಿತು ಮಾಹಿತಿ ಪಡೆದು ಮುಂದಿನ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಡಾ.ಅಶ್ವಥನಾರಾಯಣ ಭರವಸೆ ನೀಡಿದರು. ನಿಯೋಗದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ಸಿಂಡಿಕೇಟ್ ಸದಸ್ಯ ಜಿ. ಧರ್ಮಪ್ರಸಾದ್, ರಾಮಲಿಂಗಪ್ಪ, ರಮೇಶಬಾಬು, ಸಂತೋಷ್ ಬಳ್ಳೇಕೆರೆ, ಮಂಜುನಾಥ, ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾದ ಡಾ.ರವಿಕಿರಣ್, ಚಂದ್ರಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.