ADVERTISEMENT

ವಿಧಾನಪರಿಷತ್‌ ಚುನಾವಣೆ ಫಲಿತಾಂಶ ವಿಧಾನಸಭಾ ಚುನಾವಣೆ ದಿಕ್ಸೂಚಿ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 8:30 IST
Last Updated 28 ನವೆಂಬರ್ 2021, 8:30 IST
ಶಿವಮೊಗ್ಗದಲ್ಲಿ ಶನಿವಾರ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.
ಶಿವಮೊಗ್ಗದಲ್ಲಿ ಶನಿವಾರ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.   

ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನಗಳನ್ನು ಜಯಿಸಲಿದೆ.ಈ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕ ಶನಿವಾರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ವಿಧಾನಪರಿಷತ್‌ಗೆ ಕಾಂಗ್ರೆಸ್‌ನಿಂದ ಯಾವುದೇ ಅಭ್ಯರ್ಥಿ ಹಾಕಿದರೂ ಪ್ರಚಾರ ಮಾಡದೇ ಗೆಲ್ಲುತ್ತಿದ್ದರು. ಇಂದು ಬಿಜೆಪಿ ದೊಡ್ಡ ಪಕ್ಷವಾಗಿ ಬೆಳೆದಿದೆ. ಎಲ್ಲೆಡೆ
ಪ್ರಧಾನಿ ಮೋದಿ ಅವರ ಅಭಿವೃದ್ಧಿ ಅಲೆ ಇದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವುದೇ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಈಗಾಗಲೇ ಎಲ್ಲಾ ಕಡೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಇದ್ದಾರೆ. ಶಾಸಕರು ಮತ್ತು ಸಂಸದರು ಇರುವುದರಿಂದ ಗೆಲುವು ಸುಲಭವಾಗಲಿದೆ. ಆದರೂ ನಿರ್ಲಕ್ಷ್ಯ ತೋರದೆ ಪ್ರತಿಯೊಬ್ಬರೂ ತಾವೇ ಅಭ್ಯರ್ಥಿ ಎಂದು ತಿಳಿದು ಪ್ರಥಮ ಪ್ರಾಶಸ್ತ್ಯದ ಮತ ಹಾಕಿಸಬೇಕು ಎಂದು ಅವರು ಕೋರಿದರು.

ADVERTISEMENT

ಬಿಜೆಪಿಯಲ್ಲಿ ಇರುವ ಕಾರ್ಯಕರ್ತರ ಪಡೆ, ಸಂಘಟನಾ ಶಕ್ತಿ ಬೇರೆ ಪಕ್ಷಗಳಲ್ಲಿ ಇಲ್ಲ. ಮೊದಲ ಸುತ್ತಿನಲ್ಲೇ ಡಿ.ಎಸ್. ಅರುಣ್ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಸಹಕರಿಸಬೇಕು ಎಂದು ಸೂಚಿಸಿದರು.

ಸಂಸದ ರಾಘವೇಂದ್ರ ಮಾತನಾಡಿ, ‘ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳು. ಗ್ರಾಮಾಂತರ ಕ್ಷೇತ್ರದಲ್ಲಿ ಜನಪ್ರತಿನಿಧಿಗಳಿಗೆ ಸಿಕ್ಕಿದ ಅನುದಾನ, ನೀರಾವರಿ ಯೋಜನೆಗಳು ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಲಿವೆ’ ಎಂದು ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕರಾದ ಎಚ್‌.ಹಾಲಪ್ಪ ಹರತಾಳು, ಅಶೋಕ್ ನಾಯ್ಕ, ವಿಧಾನಪರಿಷತ್‌ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಆರ್.ಕೆ. ಸಿದ್ಧರಾಮಣ್ಣ, ಎಂ.ಬಿ. ಭಾನುಪ್ರಕಾಶ್, ಗಿರೀಶ್ ಪಟೇಲ್, ಪವಿತ್ರಾ ರಾಮಯ್ಯ, ದತ್ತಾತ್ರಿ, ರತ್ನಾಕರ್ ಶೆಣೈ, ಪದ್ಮಿನಿ, ರುದ್ರೇಶ್, ಎಂ.ಬಿ. ಚನ್ನವೀರಪ್ಪ ಅವರೂ ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.