ADVERTISEMENT

ಓದುವ ಹವ್ಯಾಸಕ್ಕೆ ಜಾಲತಾಣಗಳೇ ಅಡ್ಡಿ: ತಮ್ಮಣ್ಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2019, 9:47 IST
Last Updated 26 ಜನವರಿ 2019, 9:47 IST
ಶಿವಮೊಗ್ಗದ ಬಸವನಗುಡಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿದ ನಗರ ಕೇಂದ್ರ ಗ್ರಂಥಾಲಯವನ್ನು ಉದ್ಘಾಟಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ. ತಮ್ಮಣ್ಣ ಪತ್ರಿಕೆ, ಪುಸ್ತಕಗಳನ್ನು ವೀಕ್ಷಿಸಿದರು.
ಶಿವಮೊಗ್ಗದ ಬಸವನಗುಡಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿದ ನಗರ ಕೇಂದ್ರ ಗ್ರಂಥಾಲಯವನ್ನು ಉದ್ಘಾಟಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ. ತಮ್ಮಣ್ಣ ಪತ್ರಿಕೆ, ಪುಸ್ತಕಗಳನ್ನು ವೀಕ್ಷಿಸಿದರು.   

ಶಿವಮೊಗ್ಗ:ಸಾಮಾಜಿಕ ಜಾಲತಾಣಗಳ ಭರಾಟೆಯ ಪರಿಣಾಮ ಜನರಲ್ಲಿ ಪುಸ್ತಕ ಓದುವ ಪ್ರವೃತ್ತಿ ಕಡಿಮೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ ಬೇಸರ ವ್ಯಕ್ತಪಡಿಸಿದರು.

ಬಸವನಗುಡಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ನಗರ ಕೇಂದ್ರ ಗ್ರಂಥಾಲಯವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು, ಯುವ ಜನರಲ್ಲೂ ಓದುವ ಹವ್ಯಾಸ ಕಾಣಿಸುತ್ತಿಲ್ಲ. ಆಧುನಿಕ ತಂತ್ರಜ್ಞಾನ ಎಷ್ಟೇ ಅಭಿವೃದ್ಧಿ ಹೊಂದಿದರೂ, ಪುಸ್ತಕ, ಪತ್ರಿಕೆ ಓದುವ ಹವ್ಯಾಸ ಬಿಡಬಾರದು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಗ್ರಂಥಾಲಯ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವ ವಿದ್ಯಾರ್ಥಿಗಳಿಗೆ ಗ್ರಂಥಾಲಯಗಳು ಪ್ರಮುಖ ಸಂಪನ್ಮೂಲ ಕೇಂದ್ರಗಳು. ವಿವಿಧ ಪರೀಕ್ಷೆಗಳಿಗೆ ಅಗತ್ಯವಾದ ಪುಸ್ತಕಗಳು ಲಭ್ಯವಿರುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಂಥಾಲಯಗಳ ಗುಣಮಟ್ಟ ಸುಧಾರಿಸಬೇಕು. ಓದುಗರ ಸೆಳೆಯಲು ಕಾರ್ಯತಂತ್ರ ರೂಪಿಸಬೇಕು ಎಂದು ಕಿವಿಮಾತು ಹೇಳಿದರು.

ಶಿವಮೊಗ್ಗದ ಲಾಲ್ ಬಹದ್ದೂರ್ ಶಾಸ್ತ್ರಿ ನಗರದಲ್ಲಿ ಸುಸಜ್ಜಿತ ಗ್ರಂಥಾಲಯ ನಿರ್ಮಿಸಲಾಗುವುದು. ಅದಕ್ಕೆ ಅಗತ್ಯವಾದ ಜಮೀನು ಒದಗಿಸಲು ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ನಗರ ಪಾಲಿಕೆ ಸದಸ್ಯ ರಮೇಶ ಹೆಗ್ಡೆ ಮಾತನಾಡಿ, ₹ 38 ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಂಥಾಲಯ ನಿರ್ಮಿಸಲಾಗಿದೆ. ಸ್ಮಾರ್ಟ್‌ಸಿಟಿ ಯೋಜನೆಯಡಿ ಗ್ರಂಥಾಲಯವನ್ನು ಗಣಕೀಕರಣ ಮಾಡಲಗುವುದು ಎಂದರು.

ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮೇಯರ್ ಲತಾ ಗಣೇಶ್, ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಜಿಲ್ಲಾ ಪಂಚಾಯಿತಿ ಸಿಇಒ ಕೆ. ಶಿವರಾಮೇಗೌಡ, ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಗ್ರಂಥಾಲಯ ಅಧಿಕಾರಿ ಪ್ರೇಮಲತಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.