ADVERTISEMENT

ಜವಳಿ ಉದ್ಯಮದಲ್ಲಿ ವಿಪುಲ ಅವಕಾಶ

ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ವೇದಾ ವಿಜಯಕುಮಾರ್

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2019, 13:00 IST
Last Updated 23 ಫೆಬ್ರುವರಿ 2019, 13:00 IST
ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ವ್ಯವಸ್ಥಾಪಕ ಸೋಲೋಮನ್ ಮೆಂಜಸ್ ಮಾತನಾಡಿದರು
ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ವ್ಯವಸ್ಥಾಪಕ ಸೋಲೋಮನ್ ಮೆಂಜಸ್ ಮಾತನಾಡಿದರು   

ಶಿವಮೊಗ್ಗ: ಜವಳಿ ಉದ್ಯಮ ಅನೇಕ ಸವಾಲುಗಳ ನಡುವೆಯೂಲಾಭದಾಯಕವಾಗಿ ಮುನ್ನಡೆಯುತ್ತಿರುವುದು ಸಂತಸದ ಸಂಗತಿ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಹೇಳಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ನೂತನ ಜವಳಿ ನೀತಿಯಡಿ ಎರಡು ದಿನಗಳ ಕಾಲ ಮಹಿಳಾ ಉದ್ಯಮಿಗಳಿಗಾಗಿ ಏರ್ಪಡಿಸಿದ್ದ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜವಳಿ ಕ್ಷೇತ್ರದಲ್ಲಿ ₹ 1,285 ಕೋಟಿ ಬಂಡವಾಳ ಹೂಡಲಾಗಿದ್ದು, ಸುಮಾರು 10 ಸಾವಿರಕ್ಕೂ ಹೆಚ್ಚಿನ ಜನರಿಗೆ ಅದರಲ್ಲೂ ವಿಶೇಷವಾಗಿ ಶೇ 90ರಷ್ಟು ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗಾವಕಾಶ ದೊರೆತಿರುವುದು ಸಂತಸದ ಸಂಗತಿ. ಜಿಲ್ಲೆಯಲ್ಲಿ ಜವಳಿ ಉದ್ಯಮದ ಬೆಳವಣಿಗೆಗೆ ವಿಫುಲ ಅವಕಾಶಗಳಿದ್ದು, ಆಸಕ್ತರು ಈ ಕಾರ್ಯಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಸುಸಂದರ್ಭ ಇದಾಗಿದೆ ಎಂದರು.

ADVERTISEMENT

ಇತ್ತೀಚೆಗೆ ಜವಳಿ ಉದ್ಯಮದಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಆರೋಗ್ಯ ಸಮಸ್ಯೆ ಬಾಧಿಸುತ್ತಿದೆ. ಅಧಿಕಾರಿಗಳು ಅದರಿಂದ ಮುಕ್ತರಾಗಲು ಪೂರಕ ವಾತಾವರಣ ಕಲ್ಪಿಸಬೇಕು. ಜವಳಿ ಉದ್ಯಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಬೇಕು ಎಂದು ಹೇಳಿದರು.

ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಈ. ಅಶೋಕ, ‘ಷಾಹಿ ಜವಳಿ ಉದ್ಯಮ ಸಂಸ್ಥೆಯು ಈಗಾಗಲೇ ಸಾಗರ ತಾಲ್ಲೂಕಿನಲ್ಲಿ ಗಾರ್ಮೆಂಟ್‌ ಆರಂಭಿಸಿದ್ದು, ಸುಮಾರು 2 ಸಾವಿರ ಮಹಿಳೆಯರಿಗೆ ಉದ್ಯೋಗ ಒದಗಿಸಿದೆ. ಜಿಲ್ಲೆಯ ಶಿಕಾರಿಪುರ ಸಮೀಪದಲ್ಲಿ 11 ಎಕರೆ ಭೂಮಿಯನ್ನು ಗುರುತಿಸಿದ್ದು, ಶೀಘ್ರದಲ್ಲಿ ಘಟಕ ಆರಂಭಗೊಳ್ಳುವ ನಿರೀಕ್ಷೆ ಇದೆ. ಇಲ್ಲಿ ಸುಮಾರು 3 ಸಾವಿರ ಮಂದಿಗೆ ಉದ್ಯೋಗಾವಕಾಶ ದೊರೆಯುವ ಸಾಧ್ಯತೆ ಇದೆ’ ಎಂದರು.

ಜವಳಿ ಉದ್ಯಮದಲ್ಲಿ ತೊಡಗಿಸಿಕೊಳ್ಳಲಿಚ್ಚಿಸುವವರಿಗೆ ಇಲಾಖೆಯಿಂದ ಅಗತ್ಯ ನೆರವು ಹಾಗೂ ಸಹಕಾರ ನೀಡಲಾಗುವುದು. ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳು ₹ 25 ಲಕ್ಷದಿಂದ ₹ 5 ಕೋಟಿ ವರೆಗೆ ಬಂಡವಾಳ ತೊಡಗಿಸುವ ಉದ್ಯಮಿಗಳಿಗೆ ಶೇ 90ರಷ್ಟು ಸಹಾಯಧನ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜವಳಿ ಉದ್ಯಮ ಕ್ಷೇತ್ರಕ್ಕೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳು, ತರಬೇತಿ, ಯೋಜನೆಗಳ ಮಾಹಿತಿ ನೀಡಲಾಯಿತು. ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಯೋಜನೆಗಳ ಮಾಹಿತಿ ನೀಡಿದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ವ್ಯವಸ್ಥಾಪಕ ಸೋಲೋಮನ್ ಮೆಂಜಸ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಶಿವಪ್ರಸಾದ್, ಜಿಲ್ಲಾ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಎಂ.ಎ. ರಮೇಶ್ ಹೆಗ್ಡೆ, ರಾಜ್ಯ ಹಣಕಾಸು ಸಂಸ್ಥೆಯ ಅಧಿಕಾರಿ ಲಿಂಗಪ್ಪ, ಗ್ರಾಮೀಣ ಜಂಟಿ ಕಾರ್ಯದರ್ಶಿ ಎಸ್. ವಿಶ್ವೇಶ್ವರಯ್ಯ, ಕಾಸಿಯಾ ಜವುಳಿ ಫ್ಯಾನಲ್ ಚೇರ್ಮನ್ ಜಯೇಶ್ ಭಟಾವಿಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.