
ಮಧು ಬಂಗಾರಪ್ಪ
ಶಿವಮೊಗ್ಗ: ‘ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ಹೀಗಾಗಿ ಆತಂಕ ಬೇಡ’ ಎಂದು ಜಿಲ್ಲಾ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
‘ಈ ನೊಟೀಸ್‌ಗಳು 2012-13ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡ ತೀರ್ಮಾನ. ಹಳೆಯ ಆದೇಶದ ಅನ್ವಯ ಈಗ ಜಾರಿಯಾಗುತ್ತಿರುವುದು ಸ್ಪಷ್ಟವಾಗಿದೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ನಮ್ಮ (ಕಾಂಗ್ರೆಸ್) ಸರ್ಕಾರವು ರೈತರನ್ನು ಒಕ್ಕಲೆಬ್ಬಿಸುವ ಯಾವುದೇ ಉದ್ದೇಶ ಹೊಂದಿಲ್ಲ ಎಂದು ದೃಢವಾಗಿ ಹೇಳಬಯಸುತ್ತೇನೆ. ಈಗಾಗಲೇ ನಾನು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿದ್ದು, ಯಾವುದೇ ಕಾರಣಕ್ಕೂ ರೈತರನ್ನು ಬಲವಂತವಾಗಿ ತೆರವುಗೊಳಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದಾರೆ.
ಅರಣ್ಯ ಹಕ್ಕು ಕಾಯ್ದೆಯಡಿ ಅವರು ಅರ್ಜಿ ಸಲ್ಲಿಸಿದ್ದರೂ ಸೂಕ್ತ ದಾಖಲಾತಿಗಳು ಇಲ್ಲದ ಕಾರಣ ಇವರ ಅರ್ಜಿಗಳು ಇನ್ನೂ ಊರ್ಜಿತವಾಗಿಲ್ಲ. ಈ ಕುರಿತು ಸಂಬಂಧಪಟ್ಟ ಸಮಿತಿಗಳು ಮೇಲ್ಮನವಿ ಸಲ್ಲಿಸುವ ಅಗತ್ಯವಿದೆ. ಸಂಬಂಧಪಟ್ಟ ಸಮಿತಿಗಳ ಮೂಲಕ ಈ ಅರ್ಜಿಗಳ ಮರು ಪರಿಶೀಲನೆ ಮತ್ತು ಮೇಲ್ಮನವಿ ಸಲ್ಲಿಕೆಗೆ ಅಗತ್ಯ ಕ್ರಮ ವಹಿಸಲಾಗುವುದು.
ನಮ್ಮ ಸರ್ಕಾರವು ರೈತರ ಮತ್ತು ಸಂತ್ರಸ್ತರ ಹಿತ ಕಾಯಲು ಸಂಪೂರ್ಣವಾಗಿ ಬದ್ಧವಾಗಿದ್ದು, ಯಡಮನೆ ಗ್ರಾಮದ ಜನರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಈ ಮೂಲಕ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.