ಶಿವಮೊಗ್ಗ: ಜಿಲ್ಲಾ ಹಾಪ್‌ಕಾಮ್ಸ್ ವತಿಯಿಂದ ಮೇ 24 ಮತ್ತು 25ರಂದು ಎರಡು ದಿನಗಳ ಕಾಲ ಶಿವಮೊಗ್ಗದಲ್ಲಿ ಮಾವು ಮತ್ತು ಹಲಸಿನ ಮೇಳ ಆಯೋಜಿಸಲಾಗಿದೆ. ಈ ವೇಳೆ ಅಂದಾಜು 10 ತಳಿಯ ಮಾವಿನ ಹಣ್ಣು ಮತ್ತು ವಿಶೇಷ ಬಗೆಯ ಹಲಸಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ ಎಂದು ಶಿವಮೊಗ್ಗ ಹಾಪ್ ಕಾಮ್ಸ್ ಅಧ್ಯಕ್ಷ ಆರ್. ವಿಜಯ್ ಕುಮಾರ್ ತಿಳಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ರೈತರು ಋತುಮಾನಕ್ಕನುಗುಣವಾಗಿ ಬೆಳೆಯುವ ತೋಟಗಾರಿಕೆ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಮತ್ತು ದರ ಒದಗಿಸಿಕೊಡುವ ಉದ್ದೇಶದಿಂದ ಈ ಮೇಳ ವಿನೋಬನಗರದ ಎಪಿಎಂಸಿ ತರಕಾರಿ ಮಂಡಿಯ ಪಕ್ಕದ ಹಾಪ್‌ಕಾಮ್ಸ್ ಜಾಗದಲ್ಲಿ ಆಯೋಜಿಸಲಾಗಿದೆ. ಮೇ 24ರಂದು ಬೆಳಿಗ್ಗೆ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಲಿದ್ದಾರೆ. ಅವರೊಂದಿಗೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
‘ಹಣ್ಣುಗಳ ಪ್ರದರ್ಶನ ಮತ್ತು ಮಾರಾಟಕ್ಕೆ 20 ಮಳಿಗಗಳನ್ನು ತೆರೆಯಲಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಯ ರೈತರು ತಾವು ಬೆಳೆದ ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ತರಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸಕ್ಕರಾಯಪಟ್ಟಣದ ವಿಶೇಷ ತಳಿಯ ಹಲಸಿನ ಹಣ್ಣುಗಳು ಮೇಳದ ಆಕರ್ಷಣೆ ಆಗಲಿವೆ’ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಹಾಪ್‌ಕಾಮ್ಸ್ ಉಪಾಧ್ಯಕ್ಷ ನಾಗೇಶ್ ನಾಯ್ಕ, ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್, ನಿರ್ದೇಶಕರಾದ ಉಂಬ್ಳೇಬೈಲು ಮೋಹನ್, ಮುನಿಸ್ವಾಮಿ, ಕಾಳರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.