
ಶಿವಮೊಗ್ಗ: ‘ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಹಾಗೂ ಪದವಿಪೂರ್ವ (ಪಿಯುಸಿ) ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
‘ಬಿಸಿಯೂಟ ಮಾತ್ರವಲ್ಲ ನೋಟ್‌ಪುಸ್ತಕ, ಪಠ್ಯಪುಸ್ತಕ, ಶೂ, ಸಾಕ್ಸ್, ಹಾಲು, ಮೊಟ್ಟೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನೂ ಅವರಿಗೆ ಕೊಡಲಾಗುವುದು’ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಇದರಿಂದ ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಎಲ್‌ಕೆಜಿ, ಯುಕೆಜಿ ಹಾಗೂ ಪಿಯುಸಿ ಓದುವವರಿಗೆ ನೆರವಾಗಲಿದೆ. ಬಿಸಿಯೂಟ ಯೋಜನೆಗೆ ಹೆಚ್ಚುವರಿಯಾಗಿ ₹200 ಕೋಟಿ ವೆಚ್ಚವಾಗಲಿದೆ’ ಎಂದು ತಿಳಿಸಿದರು.
‘ಹಾಲಿ ಸೇವೆಯಲ್ಲಿರುವ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಶಾಲೆಗಳನ್ನು ಹೊಸದಾಗಿ ಅನುದಾನಕ್ಕೆ ಒಳಪಡಿಸಲು ಹಾಗೂ ಶಿಕ್ಷಕರ ನೇಮಕಾತಿಗೆ ಅನುದಾನದ ಸಮಸ್ಯೆ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.