ಕುಂಸಿ: ಶ್ರದ್ಧೆ, ಒಳ್ಳೆಯ ಆಲೋಚನೆ ಹಾಗೂ ಸತತ ಪ್ರಯತ್ನದಿಂದ ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಬರಲು ಸಾಧ್ಯ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಅಭಿಪ್ರಾಯಪಟ್ಟರು.
ಕುಂಸಿಯ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ 2024-25ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯಿಂದ ನಡೆದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು. ಆಗ ಮಾತ್ರ ಯಾವುದಾದರೂ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಲು ಸಾಧ್ಯ. ಗ್ರಾಮಾಂತರ ಭಾಗದಲ್ಲಿ ಸರ್ಕಾರಿ ಕಾಲೇಜುಗಳ ಪೈಕಿ ಕುಂಸಿ ಕಾಲೇಜಿಗೆ ಈ ಬಾರಿ ಅತಿ ಹೆಚ್ಚು ಫಲಿತಾಂಶ ಬಂದಿದ್ದು, ನಗರ ಪ್ರದೇಶಗಳ ವಿದ್ಯಾರ್ಥಿಗಳು ಈ ಕಾಲೇಜಿಗೆ ಪ್ರವೇಶ ಪಡೆದು ವ್ಯಾಸಾಂಗ ಮಾಡುತ್ತಿರುವುದು ಹೆಮ್ಮಯ ವಿಷಯ ಎಂದರು.
ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸತತ ಶ್ರಮದ ಕಾರಣ ಈ ಬಾರಿಯ ಫಲಿತಾಂಶ ಹೆಚ್ಚಾಗಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ತಿಳಿಸಿದರು.
ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಈ ಬಾರಿ ಅತಿಹೆಚ್ಚು ಫಲಿತಾಂಶ ಬರಲು ಶ್ರಮಿಸಿದ ಉಪನ್ಯಾಸಕರಿಗೆ ಕಾಲೇಜು ಅಭಿವೃದ್ಧಿ ಸಮಿತಿಯಿಂದ ಗುರುವಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಅರವಿಂದ ಕುಮಾರ್ ಕೆ. ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಗುಡದಯ್ಯ ಮತ್ತು ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷ ಗುರುಮೂರ್ತಿ ಕೆ.ಆರ್, ಉಪಾಧ್ಯಕ್ಷೆ ಶಾರದಾ ರಂಗನಾಥ್, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.