ADVERTISEMENT

17 ಕೋಟಿ ಉದ್ಯೋಗ ಸೃಷ್ಟಿಸಿದ ಮೋದಿ: ಬಿ.ವೈ. ರಾಘವೇಂದ್ರ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 7:10 IST
Last Updated 6 ಅಕ್ಟೋಬರ್ 2021, 7:10 IST
ಶಿವಮೊಗ್ಗದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ಆತ್ಮನಿರ್ಭರ್ ಭಾರತದ ವಸ್ತು ಪ್ರದರ್ಶನವನ್ನು ಮಾಜಿ ಸಚಿವ ಸುರೇಶ್‌ ಕುಮಾರ್ ವೀಕ್ಷಿಸಿದರು.
ಶಿವಮೊಗ್ಗದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ಆತ್ಮನಿರ್ಭರ್ ಭಾರತದ ವಸ್ತು ಪ್ರದರ್ಶನವನ್ನು ಮಾಜಿ ಸಚಿವ ಸುರೇಶ್‌ ಕುಮಾರ್ ವೀಕ್ಷಿಸಿದರು.   

ಶಿವಮೊಗ್ಗ: ಕೊರೊನಾದಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ಆರ್ಥಿಕ, ಸಾಮಾಜಿಕ ಬಲವರ್ಧನೆಗೆ ಪ್ರಧಾನಿ ನರೇಂದ್ರ ಮೋದಿ ಹಲವು ಕೊಡುಗೆಗಳನ್ನು ನೀಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಯುವಕರಿಗೆ 17 ಕೋಟಿಗೂ ಹೆಚ್ಚು ಉದ್ಯೋಗ ಸೃಷ್ಟಿಯಾಗಿದ್ದು, ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶ್ಲಾಘಿಸಿದರು.

ನಗರದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಜಿಲ್ಲಾ ಬಿಜೆಪಿ ಮಂಗಳವಾರ ಹಮ್ಮಿಕೊಂಡಿದ್ದ ಸೇವೆ ಮತ್ತು ಸಮರ್ಪಣಾ ಅಭಿಯಾನದ ನವಭಾರತ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

‘ಯುವಶಕ್ತಿಗೆ ಸ್ವ ಉದ್ಯೋಗದ ಅವಕಾಶಗಳನ್ನು ಕೇಂದ್ರ ಸರ್ಕಾರ ಕಲ್ಪಿಸಿದೆ. ಅಸಂಘಟಿತ ಕಾರ್ಮಿಕರ ರಕ್ಷಣೆಗೆ ಮತ್ತು ಮಹಿಳಾ
ಸಬಲೀಕರಣಕ್ಕೆ ಒತ್ತು ನೀಡಿದೆ. ದೇಶದ ಭದ್ರತೆಗೆ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಆದರೂ, ಕಾಂಗ್ರೆಸ್ ಅನಗತ್ಯವಾಗಿ ಆರೋಪ ಮಾಡುತ್ತಿದೆ’ ಎಂದರು.

ADVERTISEMENT

‘ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನದ ಅವಕಾಶ ಭಾರತಕ್ಕೆ ಸಿಕ್ಕಿದೆ. ಅಮೆರಿಕ ಮತ್ತು ಚೀನಾವನ್ನು ಒಂದೇ ವೇದಿಕೆಯಲ್ಲಿ ತಂದು ಅವರಿಗೂ ಸಲಹೆ ನೀಡುವ ಕೆಲಸ ಮಾಡಿದೆ. ಮೋದಿ ಅವರ ಚತುರತೆ ಮತ್ತು ಅವರ ಆಡಳಿತ ವೈಖರಿ ವಿಶ್ವದಲ್ಲೇ ಅವರಿಗೆ ಮೊದಲ ಸ್ಥಾನ ದೊರಕಿಸಿದೆ. ಮುಂದಿನ ದಿನಗಳಲ್ಲಿ ವಿಶ್ವದ ಆಡಳಿತವನ್ನೇ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಸೂಚನೆಯನ್ನು ಮೋದಿ ಆಡಳಿತ ನೀಡಿದೆ’ ಎಂದು ಶ್ಲಾಘಿಸಿದರು.

ಆತ್ಮನಿರ್ಭರ್ ಭಾರತದ ವಸ್ತು ಪ್ರದರ್ಶನ ಮತ್ತು ಮಾರಾಟ, ನವಭಾರತದ ನಿರ್ಮಾಣದ ಕುರಿತವಿಚಾರ ಗೋಷ್ಠಿಗಳು, ಚಲನಚಿತ್ರ ಪ್ರದರ್ಶನ, ಸಾಂಸ್ಕೃತಿಕ ಸ್ಪರ್ಧೆ ಮತ್ತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶಾಸನ ವಿಷಯ ಕುರಿತು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷಡಿ.ಎಸ್. ಅರುಣ್, ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್, ಮಾಜಿ ಸದಸ್ಯಎಂ.ಬಿ. ಭಾನುಪ್ರಕಾಶ್, ಮೇಯರ್ ಸುನಿತಾ ಅಣ್ಣಪ್ಪ, ಯುವ ಮೋರ್ಚಾ ಅಧ್ಯಕ್ಷ ಹರಿಕೃಷ್ಣ, ಗಿರೀಶ್ ಪಟೇಲ್ ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.