ಸಾಗರ: ‘ಮಲೆನಾಡು ಪ್ರದೇಶದಲ್ಲಿ ಮಂಗನ ಕಾಯಿಲೆ ಹರಡದಂತೆ ತಡೆಗಟ್ಟುವ, ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವ ವಿಷಯದಲ್ಲಿ ವೈದ್ಯರು ಬದ್ಧತೆ ತೋರಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿವಿಮಾತು ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಮಂಗನ ಕಾಯಿಲೆ ತಡೆಗಟ್ಟುವಿಕೆ ಹಾಗೂ ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಪ್ರತಿ ವರ್ಷ ಡಿಸೆಂಬರ್‌ನಿಂದ ಮೇ ಅಂತ್ಯದವರೆಗೂ ಮಂಗನ ಕಾಯಿಲೆ ಹರಡುವ ಅವಧಿ. ಪ್ರಸಕ್ತ ವರ್ಷ ಮಳೆಗಾಲದಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗಿದ್ದು, ಬರಗಾಲ ಇಲ್ಲದಿರುವ ಕಾರಣ ಸತ್ತ ಮಂಗಗಳ ಉಣುಗುಗಳಿಂದ ಕಾಯಿಲೆಯ ವೈರಸ್ ಹರಡುವ ಸಾಧ್ಯತೆ ಕಡಿಮೆ ಇದೆ. ಹಾಗೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿರ್ಲಕ್ಷ್ಯ ಮಾಡದೆ ರೋಗ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಅವರು ಸೂಚಿಸಿದರು.
‘ಗ್ರಾಮೀಣ ಭಾಗದಲ್ಲಿ ಅರಣ್ಯವನ್ನು ಹಾದು ಹೋಗುವ ಶಾಲಾ ವಿದ್ಯಾರ್ಥಿಗಳು ಇರುವ ಪ್ರದೇಶವನ್ನು ಗುರುತಿಸಿ ವಿಶೇಷ ನಿಗಾ ವಹಿಸಬೇಕು. ಅಂತಹ ಭಾಗದ ಹತ್ತಿರದ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು’ ಎಂದು ತಿಳಿಸಿದರು.
ಶಾಸಕ ಗೋಪಾಲಕೃಷ್ಣ ಬೇಳೂರು, ವಿಧಾನ ಪರಿಷತ್‌ನ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಪ್ರಮುಖರಾದ ಅನಿತಾ ಕುಮಾರಿ, ಶಿವಕುಮಾರ್, ಡಾ.ಹರ್ಷವರ್ಧನ್, ಡಾ.ನಟರಾಜ್, ಡಾ.ಕಿರಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.