ADVERTISEMENT

ಕೋವಿಡ್ ಕುರಿತು ಆತಂಕ ಪಡುವ ಅಗತ್ಯವಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು

​ಪ್ರಜಾವಾಣಿ ವಾರ್ತೆ
Published 28 ಮೇ 2025, 16:25 IST
Last Updated 28 ಮೇ 2025, 16:25 IST
ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಮತ್ತು ಡೆಂಗಿ ಜ್ವರ ನಿಯಂತ್ರಣ ಕುರಿತು ಬುಧವಾರ ಸಮಾಲೋಚನಾ ಸಭೆ ನಡೆಯಿತು.
ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಮತ್ತು ಡೆಂಗಿ ಜ್ವರ ನಿಯಂತ್ರಣ ಕುರಿತು ಬುಧವಾರ ಸಮಾಲೋಚನಾ ಸಭೆ ನಡೆಯಿತು.   

ಸಾಗರ: ಕೋವಿಡ್ ಕುರಿತು ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು. ಈ ಬಗ್ಗೆ ಆತಂಕದ ಅಗತ್ಯವಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಮತ್ತು ಡೆಂಗಿ ನಿಯಂತ್ರಣ ಕುರಿತು ಬುಧವಾರ ನಡೆದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕೆಲವೆಡೆ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದರೂ ಹಿಂದಿನ ವರ್ಷಗಳಂತೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಿಲ್ಲ. ಆದಾಗ್ಯೂ ಮುಂಜಾಗ್ರತೆಯಿಂದ ಇದ್ದು ಕಾಯಿಲೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ADVERTISEMENT

‘ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಪ್ರತಿಯೊಂದು ತಾಲ್ಲೂಕಿನಲ್ಲೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗೆ ಸೌಲಭ್ಯ ಕಲ್ಪಿಸುವಂತೆ ಸರ್ಕಾರ ಸೂಚಿಸಿದೆ. ಮುಂದೆ ಬರಬಹುದಾದ ತುರ್ತು ಆರೋಗ್ಯ ಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿರಬೇಕು’ ಎಂದು ತಿಳಿಸಿದರು.

‘ಮಕ್ಕಳು, ಗರ್ಭಿಣಿಯರ ಆರೋಗ್ಯದ ಮೇಲೆ ವೈದ್ಯರು ಹೆಚ್ಚಿನ ನಿಗಾ ವಹಿಸಬೇಕು. ಶೀತ, ಜ್ವರ ಕಾಣಿಸಿಕೊಂಡ ಮಾತ್ರಕ್ಕೆ ಕೋವಿಡ್ ಸೋಂಕು ತಗುಲಿದೆ ಎನ್ನಲಾಗದು. ಆದರೆ ತಪಾಸಣೆ ಮಾಡಿಸುವುದರಲ್ಲಿ ತಪ್ಪಿಲ್ಲ’ ಎಂದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯ ಅಂಬುಲೆನ್ಸ್‌ಗೆ ಮೂವರು ಚಾಲಕರಿದ್ದಾರೆ. ಮತ್ತೋರ್ವ ಚಾಲಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಿ ಎಂದು ಆಸ್ಪತ್ರೆಯ ಆಡಳಿತಾಧಿಕಾರಿಗೆ ಸೂಚಿಸಿದರು.

ಡೆಂಗಿ ಜ್ವರ ತಡೆಯಲು ನಗರವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಯಾವುದೆ ಪ್ರದೇಶದಲ್ಲಿ ಮಳೆಯ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವಂತೆ ನಗರಸಭೆಯ ಅಧಿಕಾರಿಗೆ ತಿಳಿಸಿದರು.

ರಾಜ್ಯ ಸರ್ಕಾರ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲೂ ಕಿಮೋಥೆರಫಿ ಘಟಕ ಆರಂಭಿಸುವ ಚಿಂತನೆ ನಡೆಸಿದೆ. ತಾಲ್ಲೂಕು ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರ ಇರುವಂತೆ ನೋಡಿಕೊಳ್ಳಲಾಗುವುದು. ಈ ಕೇಂದ್ರಗಳಲ್ಲಿ ರೋಗಿಗಳಿಗೆ ಅಗತ್ಯವಿರುವ ಹೆಚ್ಚಿನ ಔಷಧಿಗಳು ಲಭ್ಯವಾಗಬೇಕು ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಗಣಪತಿ ಮಂಡಗಳಲೆ, ಮಧುಮಾಲತಿ, ಉಪವಿಭಾಗಾಧಿಕಾರಿ ಜಗದೀಶ್, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಕಾಶ್, ಡಾ.ಕೆ.ಪರಪ್ಪ, ಡಾ.ನಾಗರಾಜ ನಾಯ್ಕ, ಡಾ.ಹರ್ಷವರ್ಧನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.