ADVERTISEMENT

ಕೊರೊನಾ ಸಂಕಷ್ಟದಲ್ಲೂ ಪೌರಕಾರ್ಮಿಕರ ಸೇವೆ ಅನನ್ಯ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 3:16 IST
Last Updated 24 ಸೆಪ್ಟೆಂಬರ್ 2020, 3:16 IST
ಸಾಗರದಲ್ಲಿ ಬುಧವಾರ ನಡೆದ ಪೌರಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಡಾ.ನಾಗರಾಜ್ ಎಲ್. ಹಾಗೂ ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ಅವರು ಪೌರಕಾರ್ಮಿಕರನ್ನು ಗೌರವಿಸಿದರು.
ಸಾಗರದಲ್ಲಿ ಬುಧವಾರ ನಡೆದ ಪೌರಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಡಾ.ನಾಗರಾಜ್ ಎಲ್. ಹಾಗೂ ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ಅವರು ಪೌರಕಾರ್ಮಿಕರನ್ನು ಗೌರವಿಸಿದರು.   

ಸಾಗರ: ಕೊರೊನಾ ಕಾಲದಲ್ಲೂ ಊರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿರುವ ಪೌರಕಾರ್ಮಿಕರ ಸೇವೆ ಅನನ್ಯ. ಅವರು ನಿಜವಾದ ಅರ್ಥದಲ್ಲಿ ಕೊರೊನಾ ವಾರಿಯರ್ಸ್ ಎಂದು ಉಪವಿಭಾಗಾಧಿಕಾರಿ ಡಾ.ನಾಗರಾಜ್ ಎಲ್. ಹೇಳಿದರು.

ಇಲ್ಲಿನ ನಗರಸಭೆ ಆವರಣದಲ್ಲಿ ಪೌರಸೇವಾ ನೌಕರರ ಸಂಘ ಹಾಗೂ ನಗರಸಭೆ ಕಚೇರಿ ಬುಧವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಗೌರವಿಸಿ ಮಾತನಾಡಿದರು.

‘ಕೊರೊನಾ ಕಾರಣಕ್ಕೆ ಹಲವು ಇಲಾಖೆಗಳ ನೌಕರರು ಮನೆಯಿಂದ ಹೊರಬರಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲೂ ಪೌರಕಾರ್ಮಿಕರು ತಪ್ಪದೆ ಕೆಲಸ ಮಾಡಿದ್ದಾರೆ ಎನ್ನುವುದನ್ನು ಸಮಾಜ ಗುರುತಿಸಬೇಕಿದೆ’ ಎಂದರು.

ADVERTISEMENT

‘ಪೌರಕಾರ್ಮಿಕರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗುತ್ತಿಗೆ ಆಧಾರಿತ ಪೌರಕಾರ್ಮಿಕರ ಬೇಡಿಕೆಗಳ ಪಟ್ಟಿ ದೊಡ್ಡದಿದೆ. ಅವರ ಬೇಡಿಕೆಗಳನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.

ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ‘ಪ್ರತಿವರ್ಷ ಪೌರಕಾರ್ಮಿಕರ ದಿನಾಚರಣೆಯನ್ನು ಮೆರವಣಿಗೆಯ ಮೂಲಕ ಹಬ್ಬದಂತೆ ಆಚರಿಸಲಾಗುತ್ತಿತ್ತು. ಈ ವರ್ಷ ಕೊರೊನಾ ಕಾರಣಕ್ಕೆ ಸರಳವಾಗಿ ಆಚರಿಸಲಾಗುತ್ತಿದೆ. ಸದಾ ತೆರೆಮರೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಯಾವತ್ತೂ ಸಮಾಜದ ಮುಖ್ಯವಾಹಿನಿಗೆ ಬರಲು ಬಯಸುವುದಿಲ್ಲ. ಅವರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದರು.

ಪೌರ ಕಾರ್ಮಿಕರ ಮಕ್ಕಳು ಕೂಡ ಈಚಿನ ದಿನಗಳಲ್ಲಿ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದು ಆರೋಗ್ಯಕರ ಬೆಳವಣಿಗೆ ಎಂದು ಹೇಳಿದರು.

ಪರಿಸರ ಎಂಜಿನಿಯರ್‌ ಪ್ರಭಾಕರ್, ಕಂದಾಯ ಅಧಿಕಾರಿ ಸಂತೋಷ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಕ ಶೈಲೇಶ್, ರಚನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.