ADVERTISEMENT

ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ಪಾದಯಾತ್ರೆ

ಪ್ರಣವಾನಂದ ಸ್ವಾಮೀಜಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 4:48 IST
Last Updated 1 ಅಕ್ಟೋಬರ್ 2022, 4:48 IST
ಪ್ರಣವಾನಂದ ಸ್ವಾಮೀಜಿ
ಪ್ರಣವಾನಂದ ಸ್ವಾಮೀಜಿ   

ಸಾಗರ: ‘ನಾರಾಯಣ ಗುರುಗಳ ಹೆಸರಿನಲ್ಲಿ ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಜನವರಿ ಮೊದಲನೇ ವಾರದಿಂದ ಮಂಗಳೂರಿನಿಂದ ಬೆಂಗಳೂರಿನವರೆಗೆ 40 ದಿನಗಳ ಕಾಲ ಪಾದಯಾತ್ರೆ ನಡೆಸಲಾಗುವುದು’ ಎಂದು ಚಿತ್ತಾಪುರದ ನಾರಾಯಣ ಗುರುಗಳ ಶಕ್ತಿ ಪೀಠದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ತಿಳಿಸಿದ್ದಾರೆ.

‘ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬೇಡಿಕೆ ಸಲ್ಲಿಸಲಾಗಿತ್ತು. ಈಗಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಐದು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದಾಗ್ಯೂ ಸರ್ಕಾರ ಬೇಡಿಕೆಗೆ ಸ್ಪಂದಿಸಿಲ್ಲ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಈಡಿಗ ಸಮುದಾಯದ 5 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದಾರೆ. ಮಠಗಳಿಗೆ ಅನುದಾನ ನೀಡುವ ವಿಷಯದಲ್ಲೂ ಸೂಕ್ತ ಪ್ರಾತಿನಿಧ್ಯ ನೀಡದೆ ರಾಜ್ಯ ಸರ್ಕಾರ ಈಡಿಗ, ಬಿಲ್ಲವ, ನಾಮಧಾರಿ ಸಮಾಜವನ್ನು ವಂಚಿಸಿದೆ’ ಎಂದು ದೂರಿದರು.

ADVERTISEMENT

‘ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಸ್ಥಾಪಿಸಿ ಈಡಿಗ ಸಮುದಾಯದ ಅಭಿವೃದ್ಧಿಗೆ
₹ 500 ಕೋಟಿ ಮೀಸಲಿಡಬೇಕು. ಈ ಕೆಲಸ ಮಾಡದೆ ನಿರ್ಲಕ್ಷ್ಯ ಧೋರಣೆ ತಾಳಿದರೆ ಸಮುದಾಯಕ್ಕೆ ಆದ ಅನ್ಯಾಯ ಖಂಡಿಸಿ ಸರ್ಕಾರದ ವಿರುದ್ಧ ಜಾಗೃತಿ ಮೂಡಿಸುವುದು ಅನಿವಾರ್ಯ’ ಎಂದು ಅವರು ಎಚ್ಚರಿಸಿದರು.

‘ಈಡಿಗ ಸಮುದಾಯದಿಂದ 7 ಮಂದಿ ಶಾಸಕರಾಗಿದ್ದು, ಇಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಸಾಗರ ಕ್ಷೇತ್ರದ ಹರತಾಳು ಹಾಲಪ್ಪ ಅವರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಎಸೆಗಲಾಗಿದೆ. ಈ ಧೋರಣೆ ಮುಂದುವರಿದರೆ ಈಡಿಗ, ಬಿಲ್ಲವ, ನಾಮಧಾರಿ ಸಮಾಜದ ಚುನಾಯಿತ ಪ್ರತಿನಿಧಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊರಗೆ ಬರುವುದು ಸೂಕ್ತ’ ಎಂದರು.

ನಾರಾಯಣ ಗುರು ಶಕ್ತಿಪೀಠದ ಪ್ರಮುಖರಾದ ಬಿ.ಎಚ್.ಮಂಚೇಗೌಡ, ನಾಗರಾಜ್ ನಾಯ್ಕ್, ಜಯರಾಮ ಸೂರನಗದ್ದೆ, ಸುಧಾಕರ ಕುಗ್ವೆ, ಪರಶುರಾಮ್, ನಾಗರಾಜ ಕೈಸೋಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.