ADVERTISEMENT

ಕಸ್ತೂರಿ ರಂಗನ್‌ ವರದಿ ಗೊಂದಲಕ್ಕೆ ಬಿಜೆಪಿ ಹೊಣೆ

ಕಾಂಗ್ರೆಸ್ ಪ್ರಚಾರ ಸಮಿತಿ ಆಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ ಆರೋಪ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 16:36 IST
Last Updated 11 ಏಪ್ರಿಲ್ 2019, 16:36 IST

ಶಿವಮೊಗ್ಗ: ರಾಜ್ಯದಲ್ಲಿ ಡಾ.ಕಸ್ತೂರಿ ರಂಗನ್ ವರದಿ ಅವಾಂತರಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೇ ಕಾರಣ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಆಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ ಆರೋಪಿಸಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೂರೇ ತಿಂಗಳಿಗೆ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದಾಗಿ ರಾಷ್ಟ್ರೀಯ ಹಸಿರು ಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿತ್ತು. 2014ರ ಚುನಾವಣೆ ಸಮಯದಲ್ಲಿ ಇದೇ ಯಡಿಯೂರಪ್ಪ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ನಂತರ ಪಶ್ಚಿಮಘಟ್ಟದ ಜನರಿಗೆ ದ್ರೋಹ ಬಗೆದಿದ್ದಾರೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ಕೇಂದ್ರದ ಪರಿಸರ ಹಾಗೂ ಅರಣ್ಯ ಸಚಿವಾಲಯ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತು ಎರಡು ಬಾರಿ ಕರೆದಿದ್ದ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಸಂಸದರ ಸಭೆಗೆ ಯಡಿಯೂರಪ್ಪ ಗೈರು ಹಾಜರಾಗಿದ್ದರು. ಒಮ್ಮೆಯೂ ಸಂಸತ್ ಅಧಿವೇಶನದಲ ತಂದೆ ಮತ್ತು ಮಗ (ಬಿ.ವೈ.ರಾಘವೇಂದ್ರ)ಈ ವಿಷಯ ಪ್ರಸ್ತಾಪಿಸಲೇ ಇಲ್ಲ ಎಂದು ಟೀಕಿಸಿದರು.

ADVERTISEMENT

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರಲ್ಲಿ ಈ ವರದಿ ಕೈ ಬಿಡುವಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿತ್ತು. ಈ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದರೂ, ಮನವಿ ಪರಿಗಣಿಸಲಿಲ್ಲ. ರಾಷ್ಟ್ರೀಯ ಹಸಿರು ಪೀಠಕ್ಕೆ ವರದಿ ಜಾರಿಗೊಳಿಸುವುದಾಗಿ ಪ್ರಮಾಣ ಪತ್ರ ಸಲ್ಲಿಸಿದ ಕಾರಣ ಪರಿಸರ ಸೂಕ್ಷ್ಮ ಪ್ರದೇಶ ಅಧಿಸೂಚನೆ ಕಗ್ಗಂಟಾಗಿದೆ. ಕೇಂದ್ರ ಸರ್ಕಾರ ಮತ್ತೆ ಅಧಿಸೂಚನೆ ಹೊರಡಿಸಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಕೇಂದ್ರದ ವಿಫಲತೆಯ ಕಾರಣ ರಾಜ್ಯದ 1,576 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವುದು ಅನಿವಾರ್ಯವಾಗಿದೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಈ ವರದಿ ಬಗ್ಗೆ ಪ್ರಸ್ತಾಪಿಸದೇ ಜನರಿಗೆ ದ್ರೋಹ ಮಾಡಿದೆ ಎಂದು ದೂರಿದರು.

ಶಿವಮೊಗ್ಗ ಜಿಲ್ಲೆಯ ಸುಮಾರು 492 ಗ್ರಾಮಗಳು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿವೆ. ಯಡಿಯೂರಪ್ಪ ಹಾಗೂ ರಾಘವೇಂದ್ರ ವೈಫಲ್ಯದ ಹೊಣೆ ಹೊರಬೇಕು. ವರದಿ ಜಾರಿಗೆ ಕಾರಣರಾಗಿರುವ ಬಿಜೆಪಿ ಸಂಸದರನ್ನು ಪಶ್ಚಿಮಘಟ್ಟ ವ್ಯಾಪ್ತಿಯ ಜನರು ತಿರಸ್ಕರಿಸಬೇಕು ಎಂದು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಸುನೀಲ್ ಗೌಡ, ತರುಣ್ ಶೆಟ್ಟಿ, ಚೇತನ್, ಗಿರೀಶ್ ಬಾಲಾಜಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.