ADVERTISEMENT

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಆದ್ಯತೆ: ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2021, 4:44 IST
Last Updated 30 ನವೆಂಬರ್ 2021, 4:44 IST
ಡಿ.ಎಸ್. ಅರುಣ್
ಡಿ.ಎಸ್. ಅರುಣ್   

ಶಿವಮೊಗ್ಗ: ಪ್ರತಿ ಗ್ರಾಮ ಪಂಚಾಯಿತಿ ಸದಸ್ಯರಿಗೂ ₹ 2 ಸಾವಿರ ಸಭಾಭತ್ಯೆ ನೀಡಲು ಸರ್ಕಾರವನ್ನು ಕೋರಲಾಗುವುದು. ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಹೇಳಿದರು.

‘ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಚಿವ ಕೆ.ಎಸ್‌.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಪಕ್ಷದ ಹಿರಿಯರ ಸಹಕಾರ, ಸಲಹೆ, ಕಾರ್ಯಕರ್ತರ ಶ್ರಮ ಪ್ರಚಾರ ಕಾರ್ಯದಲ್ಲಿ ಉಪಯೋಗವಾಗುತ್ತಿದೆ. ದಾವಣಗೆರೆ ಜಿಲ್ಲೆಯೂ ಸೇರಿದಂತೆ ಕ್ಷೇತ್ರ ವ್ಯಾಪ್ತಿಯ 10 ವಿಧಾನಸಭಾ ಕ್ಷೇತ್ರಗಳಲ್ಲಿ 9 ಬಿಜೆಪಿ ಶಾಸಕರು ಇದ್ದಾರೆ. ಶೇ 93.5ರಷ್ಟಿರುವ ಗ್ರಾಮ ಪಂಚಾಯಿತಿ ಸದಸ್ಯರಲ್ಲಿ ಹೆಚ್ಚಿನವರು ಬಿಜೆಪಿ ಬೆಂಬಲಿತರೇ ಇದ್ದಾರೆ. 4,166 ಮತಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮೊದಲ ಪ್ರಾಶಸ್ತ್ಯದ ಮತಗಳು
ತಮಗೆ ದೊರಕಲಿವೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಿಶ್ವಾಸವ್ಯಕ್ತಪಡಿಸಿದರು.

‘ಶಿಕ್ಷಣ,ಆರೋಗ್ಯ,ಸ್ವಚ್ಛತೆಗೆ ಆದ್ಯತೆ ದೊರಕಬೇಕಿದೆ. ನಾನುಆಯ್ಕೆಯಾದರೆ ಈ ಮೂರಕ್ಕೂ ಆದ್ಯತೆ ನೀಡುತ್ತೇನೆ. ಸರ್ಕಾರದ ಯೋಜನೆಗಳು ಗ್ರಾಮೀಣ ಭಾಗವನ್ನು ಪರಿಣಾಮಕಾರಿಯಾಗಿ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಶಿಬಿರಗಳನ್ನು ಆಯೋಜಿಸಿ ಸೌಲಭ್ಯಗಳು ಮತ್ತಷ್ಟು ಹೆಚ್ಚಲು ಅಗತ್ಯ ವಾತಾವರಣ ರೂಪಿಸಬೇಕು. ಸೌಹಾರ್ದ ವೇದಿಕೆಗಳನ್ನು ಸ್ಥಾಪಿಸಲಾಗುವುದು. ಬಗರ್‌ಹುಕುಂ ಸೇರಿ ಎಲ್ಲ ಸಮಸ್ಯೆಗಳಿಗೂ ಪರಿಹಾರವ ಕಲ್ಪಿಸಲು ಬಿಜೆಪಿ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ’ ಎಂದರು.

ADVERTISEMENT

‘ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಜತೆಗೆ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೂ ಒತ್ತು ನೀಡಲಾಗುವುದು. ನಗರಮಟ್ಟದಲ್ಲಿ ಜನಪ್ರತಿನಿಧಿಗಳಿಗೆ ಭದ್ರತೆ ಇಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರತಿಯೊಬ್ಬರಿಗೂ ಆರೋಗ್ಯ ಕಾರ್ಡ್ ಸೇರಿ ಹಲವು ಸೌಲಭ್ಯಗಳನ್ನು ವಿಸ್ತರಿಸಲು ಪ್ರಯತ್ನಿಸಲಾಗುವುದು’ ಎಂದು ಪ್ರಣಾಳಿಕೆ ವಿವರ ನೀಡಿದರು.

‘ಶಿವಮೊಗ್ಗ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿದಿಲ್ಲ. ಹಾಗಾಗಿ, ಜೆಡಿಎಸ್ ಬೆಂಬಲಿತ ಸದಸ್ಯರು ತಮ್ಮ ಪರ ಮತ ಚಲಾಯಿಸುವುದಾಗಿ ಭರವಸೆ ನೀಡಿದ್ದಾರೆ. ಅವರ ನೆರವು ಪಡೆಯಲಾಗುವುದು. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ಮಾಯಕೊಂಡ ಸೇರಿ ಜಿಲ್ಲೆಯ ಎಲ್ಲಾ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡುವ ಕಾರ್ಯ ಬಿರುಸಿನಿಂದ ಸಾಗಿದೆ. ಉಳಿದ 11 ದಿನಗಳಲ್ಲಿ ಎಲ್ಲಾ 365 ಗ್ರಾಮ ಪಂಚಾಯಿತಿಗಳನ್ನು ತಲುಪುವ ಯೋಜನೆ ರೂಪಿಸಲಾಗಿದೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್, ಮುಖಂಡರಾದ ಎಸ್. ದತ್ತಾತ್ರಿ, ಶಿವರಾಜ್, ಹೃಷಿಕೇಶ್ ಪೈ, ನಾಗರಾಜ್, ಪವಿತ್ರಾ ರಾಮಯ್ಯ, ಕೆ.ವಿ.ಅಣ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.