ADVERTISEMENT

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್‌ ಮುಖಂಡರಿಂದ ಮಾನವ ಸರಪಳಿ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 1:25 IST
Last Updated 17 ಜನವರಿ 2021, 1:25 IST
ಪೆಟ್ರೋಲ್, ಡೀಸೆಲ್, ಎಲ್‍ಪಿಜಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಾವೀರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಪೆಟ್ರೋಲ್, ಡೀಸೆಲ್, ಎಲ್‍ಪಿಜಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಾವೀರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.   

ಶಿವಮೊಗ್ಗ: ಪೆಟ್ರೋಲ್, ಡೀಸೆಲ್, ಎಲ್‍ಪಿಜಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಹೊರೆಯಾಗುವಂತೆ ಮಾಡಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಬ್ಸಿಡಿ ನೆಪದಲ್ಲಿ ಗೃಹಬಳಕೆ ಸಿಲಿಂಡರ್ ದರದಲ್ಲಿ ₹ 100 ಏರಿಕೆ ಮಾಡಲಾಗಿದೆ. ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಕೊರೊನಾದಿಂದಾಗಿ ಆರ್ಥಿಕ ಬಿಕ್ಕಟ್ಟು, ಹಣದುಬ್ಬರ ಹೆಚ್ಚಳದಿಂದ ಹೈರಾಣಾಗಿರುವ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆರೋಪಿಸಿದರು.

ADVERTISEMENT

ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್‌ಗಳಿಗೆ ಸರ್ಕಾರ ನೀಡುತ್ತಿದ್ದ ಸಬ್ಸಿಡಿಯನ್ನು 6 ತಿಂಗಳಿಂದ ನಿಲ್ಲಿಸಲಾಗಿದೆ. ಇತ್ತ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ ಎಂದು ದೂರಿದರು.

ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಭಾರಿ ಏರಿಕೆಯಾಗಿದೆ. ಇದರಿಂದಾಗಿ ವಾಹನ ಸವಾರರಿಗೆ ಮತ್ತು ಲಾರಿ, ಬಸ್, ಟ್ಯಾಕ್ಸಿ ಮಾಲೀಕರಿಗೆ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಸತತವಾಗಿ ಏರಿಕೆಯಾಗುತ್ತಿರುವುದರಿಂದ ರೈತರು ಸೇರಿ ಬಡ, ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿ ಹಣದುಬ್ಬರಕ್ಕೆ ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರಕು ಸಾಗಣೆ ದರ ಹೆಚ್ಚಳದಿಂದ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೃಷಿ ಮತ್ತು ಮಾರಾಟ ಕಾರ್ಯದಲ್ಲಿ ತೊಡಕು ಉಂಟಾಗಿ ಅರ್ಥವ್ಯವಸ್ಥೆಗೆ ಧಕ್ಕೆ ಬಂದಿದೆ. ತೈಲ, ಅಡುಗೆ ಅನಿಲ ದರ ಏರದಂತೆ ನಿಯಂತ್ರಣದಲ್ಲಿರಿಸುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಸಾಮಾನ್ಯ ಜನರು ಪ್ರತಿಭಟನೆ ಮಾಡಲು ಸರ್ಕಾರವೇ ಅವಕಾಶ ನೀಡಿದಂತಾಗಿದೆ ಎಂದು ಟೀಕಿಸಿದರು.

ಬಿಜೆಪಿ ಸರ್ಕಾರ ಜನಸಾಮಾನ್ಯರನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ. ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ವಿದ್ಯುತ್ ದರ, ಅಗತ್ಯ ವಸ್ತುಗಳು, ಆಸ್ತಿ ತೆರಿಗೆ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಪಾಲಿಕೆಸದಸ್ಯೆ ರೇಖಾ ರಂಗನಾಥ್, ಮುಖಂಡರಾದ ಎನ್.ರಮೇಶ್, ಕಲಗೋಡು ರತ್ನಾಕರ್, ತೀ.ನ. ಶ್ರೀನಿವಾಸ್, ಬಿ.ಎ. ರಮೇಶ್ ಹೆಗ್ಡೆ, ಎಸ್.ಪಿ. ಶೇಷಾದ್ರಿ, ಎಲ್. ರಾಮೇಗೌಡ, ನಯಾಜ್ ಅಹಮ್ಮದ್, ಇಕ್ಕೇರಿ ರಮೇಶ್, ಯು. ಶಿವಾನಂದ, ವಿಶ್ವನಾಥ್ ಕಾಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.