ADVERTISEMENT

ಜಾತಿ, ಆದಾಯ ಪ್ರಮಾಣ ಪತ್ರ ತ್ವರಿತವಾಗಿ ವಿತರಿಸುವಂತೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 15:12 IST
Last Updated 31 ಮೇ 2025, 15:12 IST
ಶಿವಮೊಗ್ಗದಲ್ಲಿ ಶನಿವಾರ ಯುವ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಶಿವಮೊಗ್ಗದಲ್ಲಿ ಶನಿವಾರ ಯುವ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಶಿವಮೊಗ್ಗ: ಶೈಕ್ಷಣಿಕ ಉದ್ದೇಶಕ್ಕಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ವಿಳಂಬ ಮಾಡದೇ ತ್ವರಿತವಾಗಿ ವಿತರಿಸುವಂತೆ ಒತ್ತಾಯಿಸಿ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

‘ಈಗ 2025– 2026ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ. ಬಹುತೇಕ ಶಾಲಾ– ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಮುಗಿಯುತ್ತಾ ಬಂದಿದೆ. ಆದರೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಸಕಾಲದಲ್ಲಿ ಸಿಗದೇ ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ ಪ್ರಮಾಣಪತ್ರಗಳನ್ನು ವಿಳಂಬಮಾಡದೆ ತ್ವರಿತಗತಿಯಲ್ಲಿ ದೊರಕಿಸಿಕೊಡಬೇಕು’ ಎಂದು ಆಗ್ರಹಿಸಿದರು.

‘ಸರ್ಕಾರದ ನಿಯಮಾವಳಿಯಂತೆ ಯಾವುದೇ ಶಾಲೆ– ಕಾಲೇಜಿನ ಪ್ರವೇಶಕ್ಕೆ, ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹಂಚಿಕೆಗೆ ವಿದ್ಯಾರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ. ಇದಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸಕಾಲ ನಿಯಮದಂತೆ 21 ದಿನಗಳ ಕಾಲಾವಕಾಶವಿದೆ. ಇದನ್ನೇ ನೆಪವಾಗಿಟ್ಟುಕೊಂಡು ಅಧಿಕಾರಿಗಳು ಜಾತಿ, ಆದಾಯ ಪ್ರಮಾಣಪತ್ರ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಿರುವ ದಾಖಲೆಗಳನ್ನು ಒದಗಿಸಲು ವಿಳಂಬ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಪ್ರವೇಶಾವಕಾಶ ಸಿಗದೇ, ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ’ ಎಂದು ವಿವರಿಸಿದರು.

ADVERTISEMENT

ತಹಶೀಲ್ದಾರ್ ಕೂಡಲೇ ಕ್ರಮ ಕೈಗೊಂಡು, ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಸಂಬಂಧಿಸಿದ ನೌಕರರ ಸಭೆ ನಡೆಸಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಕ್ಕಾಗಿ ಜಾತಿ, ಆದಾಯ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ತಕ್ಷಣವೇ ಒದಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಗ್ರಾಮಾಂತರ ಯುವ ಘಟಕದ ಅಧ್ಯಕ್ಷ ಎನ್. ಪ್ರವೀಣ್ ಕುಮಾರ್, ಪ್ರವೀಣ್‌ಗೌಡ, ಕೆ.ಆರ್. ಶಶಿಕುಮಾರ್, ಭುವನರಾಜ್, ಪ್ರೀತಮ್, ಮಲವಗೊಪ್ಪ ಶಿವು, ಆಕಾಶ್, ವಿಷ್ಣು, ನಿಖಿಲ್, ಧನರಾಜ್ ಗೌಡ, ಅಶೋಕ್, ರಾಜೇಶ್, ಪ್ರಜ್ವಲ್ ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.