ADVERTISEMENT

ಕುಟುಂಬದ ಸದಸ್ಯರೊಂದಿಗೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2021, 5:52 IST
Last Updated 13 ಏಪ್ರಿಲ್ 2021, 5:52 IST
ಸಾಗರದಲ್ಲಿ ಕೆಎಸ್‌ಆರ್‌ಟಿಸಿ ನೌಕರರು ಕುಟುಂಬದ ಸದಸ್ಯರೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿದರು
ಸಾಗರದಲ್ಲಿ ಕೆಎಸ್‌ಆರ್‌ಟಿಸಿ ನೌಕರರು ಕುಟುಂಬದ ಸದಸ್ಯರೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿದರು   

ಸಾಗರ: ಇಲ್ಲಿನ ಕೆಎಸ್‌ಆರ್‌ಟಿಸಿ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿದರು.

ನೌಕರರ ಕುಟುಂಬದ ಮಹಿಳೆಯರು ಹಾಗೂ ಮಕ್ಕಳು ತಟ್ಟೆ ಲೋಟ ಬಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ನೌಕರರು ನಂತರ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಬಹಿರಂಗ ಸಭೆ ನಡೆಸಿದರು.

ADVERTISEMENT

ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ, ‘ಕೆಎಸ್ಆರ್‌ಟಿಸಿ ನೌಕರರ ಬೇಡಿಕೆ ಈಡೇರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಹಠಮಾರಿ ಧೋರಣೆ ತಾಳುತ್ತಿದೆ’ ಎಂದು ದೂರಿದರು.

‘6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂಬ ಬೇಡಿಕೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ದೀರ್ಘಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಆದಾಗ್ಯೂ ಸರ್ಕಾರ ಬೇಡಿಕೆಗೆ ಸ್ಪಂದಿಸದೆ ಇರುವುದು ಸರಿಯಲ್ಲ’ ಎಂದರು.

ಸಾರಿಗೆ ನೌಕರರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಚಳವಳಿಯಲ್ಲಿ ಪಾಲ್ಗೊಂಡಿರುವ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಖಳನಾಯಕನಂತೆ ಸರ್ಕಾರ ಚಿತ್ರಿಸುತ್ತಿದೆ. ಸಾರಿಗೆ ನೌಕರರು ಅತೀ ಕಡಿಮೆ ಸಂಬಳ ಪಡೆಯುತ್ತಿದ್ದಾರೆ ಎಂಬ ವಿಷಯವನ್ನು ಸರ್ಕಾರ ಮರೆಮಾಚುತ್ತಿದೆ. ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದು ಅನಿವಾರ್ಯ ಎಂದು ಹೇಳಿದರು.

ಹೋರಾಟದಲ್ಲಿ ಭಾಗಿಯಾಗಿದ್ದ ನೌಕರರ ಕುಟುಂಬದ ಗೀತಾ, ‘ಯಡಿಯೂರಪ್ಪ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಸಾರಿಗೆ ನೌಕರರ ಬೇಡಿಕೆಗಳು ನ್ಯಾಯಯುತವಾಗಿವೆ ಎಂದು ಹೇಳಿದ್ದರು. ಈಗ ಮುಖ್ಯಮಂತ್ರಿಯಾಗಿ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

ಸಾರಿಗೆ ನೌಕರರ ಒಕ್ಕೂಟದ ನಾಗರಾಜ್, ಚಂದ್ರಶೇಖರ್, ಬಸಪ್ಪ, ಪ್ರಮುಖರಾದ ಎನ್.ಡಿ. ವಸಂತಕುಮಾರ್, ಮಂಜಪ್ಪ ಹಿರೇನೆಲ್ಲೂರು, ಕನ್ನಪ್ಪ, ವೀರಭದ್ರ ನಾಯ್ಕ್, ಕೆರಿಯಪ್ಪ ಬೇಡ್ಕಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.