ADVERTISEMENT

10ಕ್ಕೆ ಸರ್ಕಾರದ ವಿರುದ್ಧ ರ್‍ಯಾಲಿ- ಕೆಪಿಸಿಸಿ ಕಾರ್ಯಾಧ್ಯಕ್ಷ  ಧ್ರುವನಾರಾಯಣ್

​ಪ್ರಜಾವಾಣಿ ವಾರ್ತೆ
Published 7 ಮೇ 2022, 3:17 IST
Last Updated 7 ಮೇ 2022, 3:17 IST
ಧ್ರುವನಾರಾಯಣ
ಧ್ರುವನಾರಾಯಣ   

ಶಿವಮೊಗ್ಗ: ರಾಜ್ಯ ಸರ್ಕಾರದ ವ್ಯಾಪಕ ಭ್ರಷ್ಟಾಚಾರ ಕುರಿತು ಜನ ಜಾಗೃತಿ ಮೂಡಿಸಲು ಕಾಂಗ್ರೆಸ್‌ನಿಂದ ಮೇ 10ರಂದು ಪ್ರತಿಭಟನಾ ರ್‍ಯಾಲಿ ಹಾಗೂ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದರು.

ಸರ್ಕಾರದ ಭ್ರಷ್ಟಾಚಾರ ಕುರಿತು ಜಾಗೃತಿ ಮೂಡಿಸಲು ಈಗಾಗಲೇ ಕೆಪಿಸಿಸಿ 9 ತಂಡಗಳನ್ನು ರಚಿಸಿದೆ. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದೆ. ಕೊನೆಯದಾಗಿ ಶಿವಮೊಗ್ಗದಲ್ಲಿ ರ್‍ಯಾಲಿ ನಡೆಸಲಾಗುತ್ತಿದೆ. ಮೇ 10ರಂದು ಬೆಳಿಗ್ಗೆ 11ಕ್ಕೆ ಅಶೋಕ ವೃತ್ತದಿಂದ ಪ್ರತಿಭಟನಾ ರ್‍ಯಾಲಿ ಆರಂಭವಾಗಿ ಬಿ.ಎಚ್.ರಸ್ತೆ, ನೆಹರೂ ರಸ್ತೆ, ಗೋಪಿ ವೃತ್ತದ ಮೂಲಕ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಭೋವಿ ಸಮುದಾಯ ಭವನ ತಲುಪಲಿದೆ. ನಂತರ ಅಲ್ಲಿ ಬಹಿರಂಗ ಸಭೆ ನಡೆಯಲಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖಂಡರು ಭಾಗವಹಿಸುವರು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾಮಗಾರಿಗಳಲ್ಲಿ ಶೇ 40ರಷ್ಟು ಕಮಿಷನ್ ನಿಯಂತ್ರಿಸಿಲ್ಲ. ಇದೇ ವಿಷಯಕ್ಕೆ ಈಗಾಗಲೇ ಸಚಿವ ಕೆ.ಎಸ್.ಈಶ್ವರಪ್ಪ ಅವರ ತಲೆದಂಡವಾಗಿದೆ. ಪಿಎಸ್ಐ ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ಸದನದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸರ್ಕಾರ ಹೇಳಿಕೆ ನೀಡಿತ್ತು. ಆದರೆ, ಹಗರಣ ನಿತ್ಯವೂ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದು ರಾಜ್ಯದಲ್ಲಿ ನಡೆದ ದೊಡ್ಡ ಹಗರಣವಾಗಿದೆ. ಇಂತಹ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು, ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಮುಂದಿನ ಚುನಾವಣೆ ದೃಷ್ಟಿ ಇಟ್ಟುಕೊಂಡು ಕಾಂಗ್ರೆಸ್‌ ಬೂತ್ ಮಟ್ಟದಿಂದ ಪಕ್ಷ ಸಂಘಟಿಸುತ್ತಿದೆ. ಈಗಾಗಲೇ ರಾಜ್ಯದಲ್ಲಿ 75 ಲಕ್ಷ ಸದಸ್ಯತ್ವ ನೋಂದಣಿಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 1.58 ಲಕ್ಷ ಸದಸ್ಯತ್ವ ನೋಂದಣಿಯಾಗಿದೆ ಎಂದರು.

ಬಿಜೆಪಿ ಸರ್ಕಾರ ಪರಿಶಿಷ್ಟರ ಅನುದಾನವನ್ನೂ ಕಡಿಮೆ ಮಾಡಿದೆ. ನಿಗಮಗಳಿಗೆ ಹಣ ನೀಡುತ್ತಿಲ್ಲ. ಪ್ರತಿ ಕ್ಷೇತ್ರದಲ್ಲೂ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳ್ಳೆಯ ಆಡಳಿತ ನೀಡಲು ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ದೂರಿದರು.

ಪತ್ರಿಕಾ ಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್‌ ಮಾಜಿ ಸದಸ್ಯಆರ್. ಪ್ರಸನ್ನಕುಮಾರ್, ಮುಖಂಡರಾದ ಆರ್. ಎಂ. ಮಂಜುನಾಥಗೌಡ, ಶಾಂತವೀರಪ್ಪಗೌಡ, ಇಸ್ಮಾಯಿಲ್ ಖಾನ್, ಬಲದೇವ ಕೃಷ್ಣ, ಡಾ.ಶ್ರೀನಿವಾಸ್ ಕರಿಯಣ್ಣ, ಎಸ್.ಪಿ. ಶೇಷಾದ್ರಿ, ಸಿ.ಎಸ್. ಚಂದ್ರಭೂಪಾಲ್, ಪಂಡಿತ್‌ ವಿ.ವಿಶ್ವನಾಥ್ (ಕಾಶಿ), ಕಲಗೋಡು ರತ್ನಾಕರ, ವಿಜಯಲಕ್ಷ್ಮೀ ಪಾಟೀಲ, ಎಂ. ಚಂದನ್, ವೈ.ಎಚ್. ನಾಗರಾಜ್. ಎಚ್.ಪಿ. ಗಿರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.