
ಸಾಗರ: ಇತಿಹಾಸ ಪ್ರಸಿದ್ಧ ದೇವಸ್ಥಾನಗಳ ಜೊತೆಗೆ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಹೊಂದಿರುವ ಸಾಗರ ತಾಲ್ಲೂಕಿನಲ್ಲಿ ಧಾರ್ಮಿಕ ಪ್ರವಾಸೋದ್ಯಮದ ಬೆಳವಣಿಗೆಗೆ ವಿಫುಲ ಅವಕಾಶಗಳಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಇಲ್ಲಿನ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ₹ 9 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಅಯ್ಯಪ್ಪಸ್ವಾಮಿ ದೇವಸ್ಥಾನದ ನಿರ್ಮಾಣದ ನೀಲನಕ್ಷೆಯ ಅನಾವರಣ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಸಿಗಂದೂರು, ವರದಹಳ್ಳಿಯಂತಹ ಧಾರ್ಮಿಕ ಕ್ಷೇತ್ರದ ಜೊತೆಗೆ ಇಕ್ಕೇರಿ, ಕೆಳದಿಯಂತಹ ಐತಿಹಾಸಿಕ ಮಹತ್ವ ಹೊಂದಿರುವ ಸ್ಥಳಗಳು ಸಾಗರ ತಾಲ್ಲೂಕಿನಲ್ಲಿವೆ. ಜಗತ್ಪ್ರಸಿದ್ಧ ಜೋಗ ಜಲಪಾತವೂ ಇಲ್ಲಿರುವುದರಿಂದ ಈ ಭಾಗದ ಪ್ರವಾಸೋದ್ಯಮದ ಬೆಳವಣಿಗೆಗೆ ಒತ್ತು ನೀಡಬೇಕಿದೆ ಎಂದರು.
ಅನೇಕ ಭಾಗಗಳಲ್ಲಿ ಅಯ್ಯಪ್ಪಸ್ವಾಮಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಲ್ಲಿನ ವಿಶಾಲ ಪ್ರದೇಶದಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಸಂತಸದ ವಿಷಯ ಎಂದು ಅವರು ಹೇಳಿದರು.
ತಾಲ್ಲೂಕಿನ 140 ದೇವಸ್ಥಾನಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನುದಾನ ನೀಡುತ್ತಿದೆ. ಅಯ್ಯಪ್ಪಸ್ವಾಮಿ ದೇವಸ್ಥಾನದ ನಿರ್ಮಾಣಕ್ಕೂ ಅಗತ್ಯ ಸಹಕಾರ ನೀಡುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಆರ್. ಚಂದ್ರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಚ್. ಹಾಲಪ್ಪ ಹರತಾಳು, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ಟಿ.ಡಿ. ಮೇಘರಾಜ್, ಮಲ್ಲಿಕಾರ್ಜುನ ಹಕ್ರೆ, ರವೀಂದ್ರನ್, ಪ್ರಸಾದ್ ಇದ್ದರು.
ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ಸಿಡಿಮದ್ದಿನ ಪ್ರದರ್ಶನ ಆಯೋಜಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.