ಶಿವಮೊಗ್ಗ: ಮುಂದಿನ ಶೈಕ್ಷಣಿಕ ವರ್ಷದೊಳಗೆ ಸರ್ಕಾರಿ ಶಾಲೆಗಳಿಗೆ 10,800 ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ 5,000 ಸರ್ಕಾರಿ ಶಾಲೆಗಳಲ್ಲಿ ₹160 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ವಿಜ್ಞಾನ ಪ್ರಯೋಗಾಲಯ ಅಳವಡಿಸಲಾಗುತ್ತಿದೆ ಎಂದರು.
ಹೊಸ ಕೊಠಡಿಗಳು, ಶೌಚಾಲಯ ಸೇರಿದಂತೆ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ₹500 ಕೋಟಿ ವ್ಯಯಿಸಲಾಗುತ್ತಿದೆ ಎಂದು ಹೇಳಿದರು.
'ಒಂದು ಜಿಲ್ಲೆ ಒಂದು ತಾಣ' ಯೋಜನೆಗೆ ಸೊರಬ ತಾಲ್ಲೂಕಿನ ಗುಡವಿ ಪಕ್ಷಿ ಧಾಮವನ್ನು ಗುರುತಿಸಿದ್ದು, ಸಾರ್ವಜನಿಕ-ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಚಂದ್ರಗುತ್ತಿಯ ರೇಣುಕಾಂಬ ದೇವಿ ಪ್ರಾಧಿಕಾರ ರಚನೆಗೆ ಸರ್ಕಾರ ಅನುಮೋದನೆ ನೀಡಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ₹6 ಕೋಟಿ ವೆಚ್ಚದಲ್ಲಿ ನೈಟ್ ಲ್ಯಾಂಡಿಂಗ್ ಉಪಕರಣ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಶರಾವತಿ ಮುಳುಗಡೆ ಸಂತ್ರಸ್ತರು, ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಇತ್ಯರ್ಥಕ್ಕೆ ಸುಪ್ರೀಂಕೋರ್ಟ್ ಸೂಚನೆಯಂತೆ ಸಮೀಕ್ಷೆ ಕಾರ್ಯ ಮುಗಿದಿದೆ. ನ್ಯಾಯಾಲಯಕ್ಕೆ ವರದಿ ಸಲ್ಲಿಸಿ ಸಂತ್ರಸ್ತರಿಗೆ ಶಾಶ್ವತ ನ್ಯಾಯ ಒದಗಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದರು.
ಸಮಾರಂಭದಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಸ್ಪಿ ಬಿ.ನಿಖಿಲ್, ಸಿಇಒ ಎನ್.ಹೇಮಂತ್ ಪಾಲ್ಗೊಂಡಿದ್ದರು.
ಧ್ವಜಾರೋಹಣದ ನಂತರ ನಡೆದ ಪಥ ಸಂಚಲನದ 22 ತುಕಡಿಗಳನ್ನು ಪ್ರೊಬೆಷನರಿ ಐಪಿಎಸ್ ಅಧಿಕಾರಿ ಮೇಘಾ ಅಗರವಾಲ್ ಮುನ್ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.