ADVERTISEMENT

ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 11:07 IST
Last Updated 6 ಮಾರ್ಚ್ 2021, 11:07 IST
ಶಿವಮೊಗ್ಗದಲ್ಲಿ ಶನಿವಾರಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು  ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಶನಿವಾರಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು  ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಾಬಾ ಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸದಾಶಿವ ಆಯೋಗದ ವರದಿಯನ್ನು ಸರ್ಕಾರ ತಕ್ಷಣ ಅಂಗೀಕರಿಸಬೇಕು. ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಹಿಂದುಳಿದ ಆಯೋಗದ ಕಾಂತ್‌ರಾಜ್ ವರದಿ ಬಹಿರಂಗಗೊಳಿಸಬೇಕು. ಜಾತಿವಾರು ಮೀಸಲಾತಿ ಜಾರಿಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಮೀಸಲಾತಿಯನ್ನು ಶೇ 50ರಿಂದ 70ಕ್ಕೆ ಹೆಚ್ಚಳ ಮಾಡಬೇಕು. ಪರಿಶಿಷ್ಟ ಮೀಸಲಾತಿಯನ್ನು ಶೇ 25ಕ್ಕೆ ನಿಗದಿ ಮಾಡಬೇಕು. ಸಂವಿಧಾನದ 9ನೇ ಪರಿಚ್ಚೇದದಲ್ಲಿ ಸೇರಿಸಬೇಕು. ಪರಿಶಿಷ್ಟ ಜಾತಿ, ಪಂಗಡಗಳ ಕಾಯ್ದೆಯ ಕಲಂ 7 (ಡಿ) ರದ್ದು ಮಾಡುವ ಮೂಲಕ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಅನ್ಯ ಯೋಜನೆಗಳ ಬಳಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ADVERTISEMENT

ಸುಪ್ರೀಂಕೋರ್ಟ್ ತೀರ್ಪಿನಿಂದ ಪರಿಶಿಷ್ಟರ ಭೂ ಪರಭಾರೆ ಕಾಯ್ದೆಯ ಆಶಯಕ್ಕೆ ಧಕ್ಕೆಯಾಗಿದೆ. ಹಾಗಾಗಿ, ರಾಜ್ಯ ಸರ್ಕಾರ ಪಿಟಿಸಿಎಲ್‌ ಕಾಯ್ದೆಗೆ ಸಮಗ್ರ ತಿದ್ದುಪಡಿ ತರಬೇಕು. ಭೂಮಿ ಕಳೆದುಕೊಳ್ಳುತ್ತಿರುವ ಪರಿಶಿಷ್ಟರಿಗೆ ಕಾನೂನು ರಕ್ಷಣೆ ನೀಡಬೇಕು. ಕೇಂದ್ರ ಸರ್ಕಾರ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ಕೈಬಿಡಬೇಕು ಎಂದು ಆಗ್ರಹಿಸಿದರು.

ಸಮಿತಿಯ ಗೌರವಾಧ್ಯಕ್ಷ ಎಂ.ಎಸ್.ಸಿದ್ಧಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎನ್.ಪ್ರಭು, ಶಿವಮೂರ್ತಿ, ರಾಜಶೇಖರ್, ಮೂರ್ತಿ, ದೇವೇಂದ್ರಪ್ಪ, ಪ್ರಶಾಂತ್, ಹನುಮೇಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.