ಸಾಗರ: ‘ಈ ಭಾಗದ ರಾಜ್ಯ, ಜಿಲ್ಲಾ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಯನ್ನು ₹5 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಶೀಘ್ರವೇ ಕಾಮಗಾರಿ ಆರಂಭಗೊಳ್ಳಲಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದರು. ‘ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹2.56 ಕೋಟಿ ವೆಚ್ಚದಲ್ಲಿ 228.13 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ, ₹2.37 ಕೋಟಿ ವೆಚ್ಚದಲ್ಲಿ 225.31 ಕಿ.ಮೀ. ಜಿಲ್ಲಾ ರಸ್ತೆ ಅಭಿವೃದ್ಧಿಗೊಳಿಸಲಾಗುತ್ತಿದ್ದು ದಸರಾ ಹಬ್ಬ ಮುಗಿಯುತ್ತಿದ್ದಂತೆ ಕೆಲಸ ಆರಂಭಗೊಳ್ಳಲಿದೆ’ ಎಂದು ಮಾಹಿತಿ ನೀಡಿದರು.
‘ಈ ವರ್ಷ ಈ ಭಾಗದಲ್ಲಿ ವಾಡಿಕೆಗಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಈಗಲೂ ಆಗಾಗ ಮಳೆಯಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಂಡರೆ ಸಾರ್ವಜನಿಕರ ಹಣ ವ್ಯರ್ಥವಾಗುತ್ತದೆ. ಈ ದೃಷ್ಟಿಯಿಂದ ಕಾಮಗಾರಿ ವಿಳಂಬವಾಗಿದೆಯೆ ಹೊರತು ಅನುದಾನದ ಕೊರತೆಯಿಂದಲ್ಲ’ ಎಂದು ಸ್ಪಷ್ಟಪಡಿಸಿದರು.
‘ಈಜುಕೊಳ ನವೀಕರಣ, ಒಳಾಂಗಣ ಕ್ರೀಡಾಂಗಣಕ್ಕೆ ಲೈಟಿಂಗ್ ವ್ಯವಸ್ಥೆ ಕಲ್ಪಿಸಲು ₹60 ಲಕ್ಷ, ತುಮರಿಯ ಇಂದಿರಾಗಾಂಧಿ ವಸತಿ ಶಾಲೆ ನಿರ್ಮಾಣಕ್ಕೆ ₹22 ಕೋಟಿ ಮಂಜೂರಾಗಿದೆ. ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ತುರ್ತು ಅವಘಡ ಎದುರಿಸಲು ₹1.50 ಕೋಟಿ ವೆಚ್ಚದಲ್ಲಿ ಅಗ್ನಿಶಾಮಕ ಘಟಕ ಆರಂಭಿಸಲಾಗುವುದು’ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅನಿಲ್ ಕುಮಾರ್, ಶಾಸಕರ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ.ರಮೇಶ್, ಶ್ರೀನಿವಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.