
ಸಾಗರ: ಇಲ್ಲಿನ ಮಾರಿಕಾಂಬಾ ದೇವಿ ಜಾತ್ರೆ ಫೆ.3ರಿಂದ 9 ದಿನ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಮಂಗಳವಾರ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ, ಸಂಘ ಸಂಸ್ಥೆಗಳ ಪ್ರಮುಖರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.
9 ದಿನಗಳ ಅವಧಿಯಲ್ಲಿ ಅಂದಾಜು 25 ಲಕ್ಷ ಜನರು ಭೇಟಿ ನೀಡುವ ನಿರೀಕ್ಷೆ ಇದೆ. ಮೊದಲ ದಿನ ಮಾರಿಕಾಂಬಾ ದೇವಿಯ ತವರುಮನೆ ದೇವಾಲಯದಲ್ಲಿ ಬೆಳಿಗ್ಗೆ 5ಕ್ಕೆ ಮೊದಲ ಪೂಜೆ ನಡೆಯಲಿದೆ. ದರ್ಶನಕ್ಕೆ ವಿಶೇಷ ಪಾಸ್ ವ್ಯವಸ್ಥೆ ಇಲ್ಲ. ಅಂಗವಿಕಲರು, ವೃದ್ಧರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಉಳಿದಂತೆ ಸರದಿ ಸಾಲಿನಲ್ಲಿ ದೇವಿಯ ದರ್ಶನ ಪಡೆಯಬೇಕು ಎಂದು ಅವರು ತಿಳಿಸಿದರು.
ಜಾತ್ರೆಯ ವೇಳೆ ಪ್ರತಿ ದಿನವೂ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹವಾಗುತ್ತದೆ. ಸಕಾಲದಲ್ಲಿ ಸಮರ್ಪಕ ವಿಲೇವಾರಿಗೆ ಹೆಚ್ಚುವರಿ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
ರಥದ ಸುರಕ್ಷತೆಯ ಬಗ್ಗೆ ಜಾತ್ರಾ ಸಮಿತಿಯವರು ಸಂಬಂಧಪಟ್ಟ ಇಲಾಖೆಯಿಂದ ದೃಢೀಕರಣ ಪತ್ರ ಪಡೆಯಬೇಕು. ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ತಿಳಿಸಿದರು.
ಈ ಭಾಗದಲ್ಲಿ ಗಾಂಜಾ, ಮಟ್ಕಾ, ಇಸ್ಪೀಟ್ ದಂಧೆ ನಿಲ್ಲುವಂತೆ ಮಾಡಬೇಕು ಎಂದು ಶಾಸಕ ಬೇಳೂರು ಮಾಡಿದ ಮನವಿಗೆ ಪ್ರತಿಕ್ರಿಯಿಸಿದ ಅವರು, ಗಾಂಜಾ ವಹಿವಾಟು ತಡೆಯಲು ವಿಶೇಷ ನಿಗಾ ವಹಿಸಲಾಗಿದೆ. ಮಟ್ಕಾ, ಇಸ್ಪೀಟ್ ದಂಧೆ ನಡೆಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 112 ರಡಿ ಸಂಘಟಿತ ಅಪರಾಧ ಎಸಗುವ ಆರೋಪದ ಮೇರೆಗೆ ಪ್ರಕರಣ ದಾಖಲಿಸಲಾಗುವುದು ಎಂದರು.
ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ರಶ್ಮಿ ಜೆ.ಎಚ್. ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಎಎಸ್ ಪಿ ಬೆನಕ ಪ್ರಸಾದ್, ಮಾರಿಕಾಂಬಾ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್. ನಾಗೇಂದ್ರ, ಕಾರ್ಯದರ್ಶಿ ಬಿ.ಗಿರಿಧರ ರಾವ್, ಖಜಾಂಚಿ ನಾಗೇಂದ್ರ ಕುಮಟಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.