
ಸಾಗರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.23 ಹಾಗೂ 24 ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಸಹಕರಿಸಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ ಬೇಸೂರು ಮನವಿ ಮಾಡಿದ್ದಾರೆ.
ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಸೋಮವಾರ ಅನಾವರಣಗೊಳಿಸಿ ಮಾತನಾಡಿದರು.
ಈವರೆಗೆ 60 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿನ ಕಾಲೇಜಿನಲ್ಲಿ ಶಿಕ್ಷಣ ಪಡೆದು ತಮ್ಮ ಬದುಕನ್ನು ರೂಪಿಸಿಕೊಂಡಿದ್ದಾರೆ. ಈಗಲೂ ಈ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರವೇಶ ಪಡೆಯಲು ಪೈಪೋಟಿ ಇರುವುದು ಕಾಲೇಜಿನ ಶೈಕ್ಷಣಿಕ ಗುಣಮಟ್ಟದ ಸಂಕೇತವಾಗಿದೆ ಎಂದರು.
₹ 95 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಕಾಲೇಜಿನ ಐದು ಹೆಚ್ಚುವರಿ ಕೊಠಡಿಗಳನ್ನು ಡಿ.23 ರಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಲೋಕಾರ್ಪಣೆಗೊಳಿಸಲಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕಾಲೇಜಿನಲ್ಲಿ ಓದಿ ಉತ್ತಮ ಸಾಧನೆ ಮಾಡಿರುವ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಕೆ.ಸಿ.ಸತ್ಯನಾರಾಯಣ, ಪ್ರಮುಖರಾದ ಲೋಕೇಶ್, ಬಸವರಾಜ್, ಭವ್ಯ ಕೃಷ್ಣಮೂರ್ತಿ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಇದ್ದರು.
ಡಿ. 24ಕ್ಕೆ ರಾಜೇಶ್ ಕೃಷ್ಣನ್ ಸಂಗಡಿಗರಿಂದ ರಸಮಂಜರಿ
ಕಾಲೇಜಿನ ಸುವರ್ಣ ಮಹೋತ್ಸವದ ಅಂಗವಾಗಿ ಡಿ. 24 ರಂದು ಸಂಜೆ 7 ಗಂಟೆಗೆ ನೆಹರೂ ಮೈದಾನದಲ್ಲಿ ಗಾಯಕ ರಾಜೇಶ್ ಕೃಷ್ಣನ್ ಮತ್ತು ಸಂಗಡಿಗರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. 23 24 ಈ ಎರಡೂ ದಿನಗಳ ಕಾಲ ಮಧ್ಯಾಹ್ನ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಭೋಜನದ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಿಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.