ADVERTISEMENT

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಪರಿಸರ ನಾಶ ಸಂಭವಿಸಲ್ಲ: ಆರ್. ರವೀಂದ್ರ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 7:22 IST
Last Updated 25 ಆಗಸ್ಟ್ 2025, 7:22 IST
   

ಕಾರ್ಗಲ್: ‘ಶರಾವತಿ ಕೊಳ್ಳದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಹೆಚ್ಚಿನ ಪ್ರಮಾಣದ ಪರಿಸರ ನಾಶ ಸಂಭವಿಸುವುದಿಲ್ಲ’ ಎಂದು ಕೆಪಿಸಿ ಡೆಪ್ಯುಟಿ ಜನರಲ್ ಮ್ಯಾನೇಜರ್ ಆರ್. ರವೀಂದ್ರ ತಿಳಿಸಿದ್ದಾರೆ. 

‘ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಮಂತ್ರಾಲಯ ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದು, ಯೋಜನೆ ಅನುಷ್ಠಾನದ ವೇಳೆ ಅರಣ್ಯ ಇಲಾಖೆ, ಅರಣ್ಯ ಸಚಿವಾಲಯ ನಿಗದಿಪಡಿಸುವ ಮಾನದಂಡದಡಿ ಕಾರ್ಯಾಚರಣೆ ನಡೆಸಲಾಗುತ್ತದೆ. ವನ್ಯಜೀವಿಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಿದ್ದು, ಅವುಗಳಿಗೂ ಧಕ್ಕೆಯಾಗುವುದಿಲ್ಲ ಎಂಬುದನ್ನು ಖಚಿತ ಪಡಿಸಿಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ. 

‘ರಾಜ್ಯ ಮತ್ತು ಕೇಂದ್ರ ವನ್ಯಜೀವಿ ಮಂಡಳಿ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಿದೆ. ಯೋಜನೆಯ ಬಹುಪಾಲು ರಚನೆಗಳು ಸುರಂಗದ ಒಳಗೆ ಇರುವುದರಿಂದ ಭೂಮಿಯ ಮೇಲ್ಮೈನಲ್ಲಿ ಕನಿಷ್ಠ ಪರಿಣಾಮ ಉಂಟಾಗುತ್ತದೆ. ಭೂಕಂಪ ಶಾಸ್ತ್ರದ ರಾಷ್ಟ್ರೀಯ ಕೇಂದ್ರದ ನಿಯಮದಂತೆ ಸುರಂಗದಲ್ಲಿ ತಡೆಗೋಡೆಗಳನ್ನು ನಿರ್ಮಿಸುವುದರಿಂದ ಭೂಕುಸಿತ ಸಂಭವಿಸುವುದಿಲ್ಲ’ ಎಂದು ಮಾಹಿತಿ ನೀಡಿದ್ದಾರೆ. 

ADVERTISEMENT

‘ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಜಗತ್ತಿನ ಅತಿದೊಡ್ಡ ಬ್ಯಾಟರಿ ತಂತ್ರಜ್ಞಾನವೆಂದು ಪರಿಗಣಿಸಲಾಗುತ್ತಿದೆ. ಇದನ್ನು ಎರಡು ಜಲಾಶಯಗಳ ಮಧ್ಯೆ ಕಾರ್ಯಗತಗೊಳಿಸಲಾಗುತ್ತದೆ. ಹೆಚ್ಚುವರಿ ವಿದ್ಯುತ್ ಇದ್ದಾಗ ಕೆಳಗಿನ ನೀರನ್ನು ಗೇರುಸೊಪ್ಪ ಜಲಾಶಯದಿಂದ ಮೇಲಿನ ತಳಕಳಲೆ ಜಲಾಶಯಕ್ಕೆ ಪಂಪ್ ಮಾಡಿ ಶೇಖರಿಸಲಾಗುತ್ತದೆ. ಹೀಗಾಗಿ ಹೆಚ್ಚಿನ ಮುಳುಗಡೆ ಸಮಸ್ಯೆ ಎದುರಾಗುವುದಿಲ್ಲ. ಇಲ್ಲಿ ಹೊಸ ಜಲಾಶಯಗಳನ್ನು ನಿರ್ಮಿಸುವ ಅಗತ್ಯವಿಲ್ಲ. ಗೇರುಸೊಪ್ಪಾ ಭಾಗದ ಜನರಿಗೆ ನೀರಿನ ವಿಚಾರದಲ್ಲಿ ಯಾವುದೇ ಅನಾನುಕೂಲ ಆಗುವುದಿಲ್ಲ’ ಎಂದು ತಿಳಿಸಿದ್ದಾರೆ. 

‘ಪರಿಸರವಾದಿಗಳು, ಹೋರಾಟಗಾರರು ಮಾತ್ರವಲ್ಲದೇ ಸ್ಥಳೀಯರಿಗೆ ಯಾವುದೇ ಆತಂಕ ಬೇಡ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.