ADVERTISEMENT

ಸ್ಫೋಟ ಪ್ರಕರಣ: ಈಶ್ವರಪ್ಪ ವಿರುದ್ಧ ಪ್ರಧಾನಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 3:15 IST
Last Updated 28 ಜನವರಿ 2021, 3:15 IST

ಶಿವಮೊಗ್ಗ: ಹುಣಸೋಡು ಸ್ಫೋಟ ಪ್ರಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಮುಖಂಡರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

‘ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಹುಣಸೋಡು ಸ್ಫೋಟದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಕಾರಣ. ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಈಶ್ವರಪ್ಪ ಮೌನ ಪ್ರದರ್ಶಿಸಿದ್ದರು. ಸ್ಫೋಟ ಪ್ರಕರಣದ ನಂತರ ಅಕ್ರಮ ಗಣಿಗಾರಿಕೆ ಸ್ಥಗಿತಗೊಳಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ’ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

‘ಸ್ಫೋಟದಿಂದ 100 ಕಿ.ಮೀ.ವರೆಗೂ ಶಬ್ದ ಕೇಳಿಸಿತ್ತು. ಪರಿಸರದ ಮೇಲೆ ತೀವ್ರ ಪರಿಣಾಮ ಬೀರಿದೆ. ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ. ಇಷ್ಟಾದರೂ ಕ್ರಮಕೈಗೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಮೌನವಾಗಿದ್ದಾರೆ. ಅಧಿಕಾರಿಗಳ ವೈಫಲ್ಯಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಕಾರಣ. ಹಾಗಾಗಿ, ಸ್ಫೋಟಕ್ಕೆ ಇವರನ್ನೆ ಹೊಣೆಯನ್ನಾಗಿಸಬೇಕು’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ.ವಸಂತ ಕುಮಾರ್ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.